ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆಯುವುದಲ್ಲದೆ, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಜೆಡಿಎಸ್‌ನ ಮಹಾಪ್ರಧಾನ ಕಾರ್ಯದರ್ಶಿ ಡ್ಯಾನಿಸ್ ಹಾಲಿ ತಿಳಿಸಿದ್ದಾರೆ.
ರಾಜ್ಯದ ಜನತೆ ಜೆಡಿಎಸ್‌ಗೆ ಸಂಪೂರ್ಣ ಬಹುಮತ ನೀಡಲಿದ್ದಾರೆ. ಈ ಮೂಲಕ ಮೊದಲ ಹಂತದ ಚುನಾವಣೆಯಲ್ಲಿ ಜೆಡಿಎಸ್ ಕನಿಷ್ಠ 50 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅವರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದ ತಕ್ಷಣವೇ ರಾಷ್ಟ್ರಪತಿ ಆಡಳಿತಾವಧಿಯಲ್ಲಿ ರಾಜ್ಯಪಾಲರು ಕೈಗೊಂಡಿರುವ ಯೋಜನೆಗಳನ್ನು ಹಿಂಪಡೆದು, ಜನತೆಗೆ ಬೇಕಾಗುವಂತಹ ಅಭಿವೃದ್ದಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಅವರು ಘೋಷಿಸಿದರು.
ಎಸ್.ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರು ಅಭಿವೃದ್ದಿಯಾಗಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ. ಆದರೆ ಆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಸುಮಾರು 40 ಸಾವಿರ ಎಕರೆ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ. ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ತಕ್ಷಣ 40 ಸಾವಿರ ಎಕರೆ ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸಲಾಗುವುದು ಎಂದು ಅವರು ತಿಳಿಸಿದರು.
ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ, ದೇವೇಗೌಡರ ಮಾರ್ಗದರ್ಶನದಲ್ಲಿ ಕುಮಾರಸ್ವಾಮಿಯವರು ಟ್ವೆಂಟಿ20 ಮ್ಯಾಚ್‌ನಲ್ಲಿ ಭರ್ಜರಿ ವಿಜಯ ಸಾಧಿಸಲಿದ್ದಾರೆ ಎಂದು ಅವರು ಅಭಿಪ್ರಾಯ ಪಟ್ಟರು.
|