ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಜೆಟ್ ಮಂಡನೆ ಬಳಿಕ ವಿರೋಧ ಹೇಳಿಕೆಗಳು, ಪ್ರತಿಭಟನೆಗಳು ನಡೆಯುತ್ತಲೇ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮವಾಗಿ ವಿಧಾನಸೌಧ ಸುತ್ತ ಜು.27ರ ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಹೇರಿದೆ.
ಬಜೆಟ್ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅನೇಕ ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿವೆ. ಇದರಿಂದ ಕಲಾಪಕ್ಕೂ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ನಿಷೇಧಾಜ್ಞೆ ಹೇರಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ್ ಬಿದರಿ ತಿಳಿಸಿದ್ದಾರೆ.
ವಿಧಾನಸೌಧದ ಒಂದು ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಐದು ಮಂದಿಗಿಂತ ಹೆಚ್ಚು ಮಂದಿ ಗುಂಪು ಸೇರುವುದು, ಮೆರವಣಿಗೆ ನಡೆಸುವುದು ಹಾಗೂ ಮಾರಕ ಆಯುಧಗಳನ್ನು ಹಿಡಿದು ಸುತ್ತಾಡುವುದನ್ನು ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.
|