ರಾಜ್ಯದಲ್ಲಿ ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳನ್ನು ಶೀಘ್ರವೇ ಬರಪೀಡಿತ ಎಂದು ಘೋಷಿಸಲಾಗುವುದಾಗಿ ಕಂದಾಯ ಸಚಿವ ಕರುಣಾಕರ ರೆಡ್ಡಿ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಗುರುಪಾದಪ್ಪ ನಾಗಮಾರಪಲ್ಲಿ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 6 ವಾರಗಳ ಮಳೆ ಕೊರತೆ ಪ್ರಮಾಣವನ್ನು ಗಮನಿಸಿದರೆ ರಾಜ್ಯದ 6 ಜಿಲ್ಲೆಗಳಲ್ಲಿ ತೀವ್ರ ಮಳೆ ಕೊರತೆ, 14 ಜಿಲ್ಲೆಗಳಲ್ಲಿ ಮಳೆ ಪ್ರಮಾಣದಲ್ಲಿ ಸಾಮಾನ್ಯ ಕೊರತೆ ಹಾಗೂ ಉಳಿದ 8 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಿದೆ.
ರಾಜ್ಯದಲ್ಲಿ ಮಳೆ ಪರಿಸ್ಥಿತಿ ಕುರಿತಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸರ್ಕಾರಕ್ಕೆ ಸಕಾಲಕ್ಕೆ ವರದಿ ಸಲ್ಲಿಸುತ್ತಿದ್ದಾರೆ. ಬಿಜಾಪುರ, ರಾಯಚೂರು, ಬಾಗಲಕೋಟೆ, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ತುಂಬಾ ಕಡಿಮೆ ಇದೆ. ರಾಮನಗರ, ದಾವಣಗೆರೆ, ಮೈಸೂರು, ಬೀದರ್, ಬೆಳಗಾವಿ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಮಳೆ ಕೊರತೆ ಕಾಣಿಸಿಕೊಂಡಿದೆ.
ಪ್ರತೀವಾರ ಮುಂಗಾರು ಮಳೆಯ ಪ್ರಮಾಣವನ್ನು ತಜ್ಞರು ಪರಿಶೀಲಿಸುತ್ತಿದ್ದಾರೆ. ಮಳೆಯ ಕೊರತೆ ಮುಂದುವರಿದಲ್ಲಿ ಆಯಾ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು.
|