ಎಸ್ಎಸ್ಎಲ್ಸಿ ಪರೀಕ್ಷಾ ಪದ್ದತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ಪದ್ಧತಿಗೆ ಬಗ್ಗೆ ಶ್ರೀಕಂಠಪ್ಪ ವರದಿ ಹಾಗೂ ಜಯಲಕ್ಷ್ಮಿ ವರದಿಯಲ್ಲಿ ಕೆಲವು ಗೊಂದಲಗಳು ಕಂಡು ಬಂದಿರುವುದರಿಂದ ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಇನ್ನೊಂದು ಸಮಿತಿ ರಚಿಸಿ, ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿಯೇ ಎಸ್ಎಸ್ಎಲ್‌ಸಿ ಪರೀಕ್ಷಾ ಪದ್ಧತಿಯ ಬಗ್ಗೆ ಅಂತಿಮ ವರದಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದರು.
ಭಾಷಾ ನೀತಿ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಶೀಘ್ರವೇ ಮನವಿ ಸಲ್ಲಿಸಲಾಗುವುದು. ಇದಕ್ಕಾಗಿ ವಕೀಲರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.
ಇದೇ ವೇಳೆ ಮಧ್ಯಾಹ್ನದ ಬಿಸಿಯೂಟದ ಕುರಿತು ಮಾತನಾಡಿದ ಅವರು, ಬಿಸಿಯೂಟ ಯೋಜನೆಗೆ ಹೆಚ್ಚಿನ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.
|