ರಾಜ್ಯದಲ್ಲಿ ಹೆಚ್ಚುತ್ತಿರುವ ವಿಧ್ವಂಸಕ ಕೃತ್ಯಗಳು ಮತ್ತು ಭಯೋತ್ಪಾದಕ ಶಕ್ತಿಗಳನ್ನು ಹತ್ತಿಕ್ಕಲು ಕೋಕಾ ಕಾಯ್ದೆ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದೊಂದಿಗೆ ಶೀಘ್ರವೇ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯಕ್ಕೆ ಬುಧವಾರ ಬಾಗಿನ ಅರ್ಪಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಇತ್ತೀಚೆಗೆ ರಾಜ್ಯದ ವಿದ್ಯುತ್ ಸ್ಥಾವರ ಹಾಗೂ ಜಲಾಶಯಗಳ ಅಣೆಕಟ್ಟುಗಳನ್ನು ಸ್ಫೋಟಿಸುವ ಬಗ್ಗೆ ಭಯೋತ್ಪಾದಕರು ಸಂಚು ರೂಪಿಸಿದ್ದಾರೆ ಎಂಬ ಬಗ್ಗೆ ಮಾಹಿತಿಗಳು ದೊರೆತಿವೆ. ಈ ನಿಟ್ಟಿನಲ್ಲಿ ಈ ಸ್ಥಳಗಳಿಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಕಳಸಾ ಬಂಡೂರಿ ನೀರಾವರಿ ಯೋಜನೆಗೆ ಸುಪ್ರೀಂಕೋರ್ಟ್ ಈಗಾಗಲೇ ಅವಕಾಶ ನೀಡಿದೆ. ಆದರೆ, ಕೇಂದ್ರ ಸರ್ಕಾರ ಅನುಮತಿ ನೀಡುತ್ತಿಲ್ಲ. ಅಲ್ಲದೆ, ಹೊಗೇನಕಲ್‌ನಲ್ಲಿ ಕಾಮಗಾರಿಗೆ ಅವಕಾಶ ಮಾಡಿಕೊಡುವ ಮೂಲಕ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿದರು.
|