ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಆಡಳಿತದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಶತದಿನಗಳತ್ತ ದಾಪುಗಾಲಿಡುತ್ತಿದೆ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9 ರಂದು ರಾ ಜ್ಯಾದ್ಯಂತ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದಗೌಡ, ಜನಸ್ಪಂದನದ ಅಂಗವಾಗಿ 'ನೂರು ದಿನ - ನೂರು ಯೋಜನೆ' ಕಿರು ಹೊತ್ತಗೆ ಬಿಡುಗಡೆಗೊಳಿಸಿ, ಸರ್ಕಾರದ ಸಾಧನೆಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಪಕ್ಷದ ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ನಿಟ್ಟಿನಲ್ಲಿ ಸಹಕಾರ ನೀಡಲಿದ್ದಾರೆ ಎಂದು ಅವರು ವಿವರಣೆ ನೀಡಿದರು.
ಇದೇ ವೇಳೆ ದತ್ತಪೀಠದ ಕುರಿತು ಮಾತನಾಡಿದ ಅವರು, ದತ್ತಪೀಠಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಅನುಸಾರ ಮುಂದುವರಿಯಲಾಗುವುದು. ಇದರಲ್ಲಿ ಯಾವುದೇ ಸಮುದಾಯಕ್ಕೆ ನೋವು ಅಗದ ರೀತಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.
ಕರಾವಳಿಯಲ್ಲಿ ದೇಶ ವಿರೋಧಿ ಸಂಘಟನೆಗಳ ಚಟುವಟಿಕೆಗಳು ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ನಿಗಾ ಇರಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ ಅವರು, ಈ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
|