ಆಡಳಿತಾರೂಢ ಬಿಜೆಪಿ ಪಕ್ಷದಲ್ಲಿ ಭಿನ್ನಮತ ಬಹಿರಂಗವಾಗಿ ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ನಾಲ್ಕು ತಿಂಗಳಲ್ಲಿ ರಾಜ್ಯದ ರಾಜಕೀಯದಲ್ಲಿ ಭಾರಿ ಬದಲಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ರಾಮನಗರದ ಇಟ್ಟಮಡು ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಮನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಇಡೀ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ತಾಂಡವವಾಡುತ್ತಿರುವ ಮೂಲಕ ರೈತ ಸಮುದಾಯ ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದು, ನೊಂದ ರೈತರು ಮುಂದಿನ ದಿನಗಳಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬಿಜೆಪಿ ಮಲತಾಯಿ ಧೋರಣೆಯಿಂದ ಜಿಲ್ಲೆಯ ಅಭಿವೃದ್ಧಿ ಸಂಪೂರ್ಣವಾಗಿ ಕುಂಠಿತಗೊಂಡಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ,ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ ದಿನದಿಂದ ಹಿಡಿದು ಈವರೆಗೂ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿದೆ. ಇದೀಗ ಶಾಸಕ, ಸಚಿವರು ಮತ್ತು ಮುಖ್ಯಮಂತ್ರಿಗಳ ನಡುವೆಯೇ ಭಿನ್ನಮತ ಸ್ಫೋಟಗೊಂಡಿದೆ. ಈ ಹಿನ್ನೆಲೆಯಲ್ಲಿ ಆಡಳಿತಾರೂಢ ಬಿಜೆಪಿಗೆ ರಾಜ್ಯದ ಹಿತಕ್ಕಿಂತ ವೈಯಕ್ತಿಕ ಸಮಸ್ಯೆಯ ಬಗೆಹರಿಕೆಯೇ ಪ್ರಮುಖವಾಗಿದೆ ಎಂದು ದೂರಿದರು.