'ರಾಜ್ಯಪಾಲರೇ ರಾಜಕಾರಣ ಮಾಡಬೇಡಿ' ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಕಿಡಿಕಾರಿದ್ದಾರೆ.
ಶನಿವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ತಮ್ಮ ಘನತೆ ಮರೆತು, ವಿರೋಧ ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅವರು ಹಿರಿಯರು,ರಾಜ್ಯ ಸರ್ಕಾರಕ್ಕೆ ಮಾರ್ಗದರ್ಶನ ಮಾಡಬೇಕೆ ವಿನಃ ರಾಜಕಾರಣಿಯಂತೆ ವರ್ತಿಸಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಆಗು-ಹೋಗುಗಳ ಬಗ್ಗೆ ಸರ್ಕಾರಕ್ಕೆ ಮಾರ್ಗದರ್ಶನ ಮಾಡಬೇಕಾದ ರಾಜ್ಯಪಾಲರು, ಸಿದ್ದರಾಮಯ್ಯನವರಂತೆಯೋ, ಉಗ್ರಪ್ಪನವರಂತೆ ಬಹಿರಂಗ ಹೇಳಿಕೆ ಕೊಡುತ್ತಿದ್ದರೆ. ರಾಜ್ಯದ ಜನರು ಏನಂತ ತಿಳಿದುಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉತ್ತರ ಕರ್ನಾಟಕದಲ್ಲಿ ನೆರೆ ಸಂತ್ರಸ್ತರಿಗಾಗಿ ಪರಿಹಾರ ಕಾಮಗಾರಿಗಳನ್ನು ಸಮರ್ಪಕವಾಗಿ ನಡೆಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಕಳೆದ ಎರಡು ತಿಂಗಳಿನಿಂದ ನಡೆಸಿರುವ ಪರಿಹಾರ ಕಾಮಗಾರಿಗಳ ಬಗ್ಗೆ ನನ್ನ ಅಸಮಾಧಾನವಿದೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಆ ಭಾಗದ ಜನತೆ ತೀವ್ರ ಸಂಕಷ್ಟದಲ್ಲಿದ್ದಾರೆ. ಹಾಗಿದ್ದರೂ ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಪರಿಹಾರ ನೀಡುವಲ್ಲಿ ಕ್ರಮ ಕೈಗೊಂಡಿಲ್ಲ ಎಂದು ತಮ್ಮ ಅತೃಪ್ತಿಯನ್ನು ವ್ಯಕ್ತಪಡಿಸಿದ್ದರು. ಈ ಕುರಿತು ಇಂಧನ ಸಚಿವ ಈಶ್ವರಪ್ಪ ರಾಜ್ಯಪಾಲರ ವಿರುದ್ಧ ಕಿಡಿಕಾರಿದರು.