ಲೋಕಸಭೆ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಯಲ್ಲಿ ವಿಳಂಬ ಸಾಧ್ಯತೆ

ಬೆಂಗಳೂರು, ಸೋಮವಾರ, 27 ಜನವರಿ 2014 (19:30 IST)

PTI
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಅಖೈರುಗೊಳಿಸುವ ಪ್ರಕ್ರಿಯೆ ಕಾಂಗ್ರೆಸ್‌ನಲ್ಲಿ ಇನ್ನಷ್ಟು ವಿಳಂಬವಾಗಲಿದೆ.

ಚುನಾವಣಾ ತಯಾರಿ ಉದ್ದೇಶಕ್ಕಾಗಿ ಗುಲ್ಬರ್ಗದಲ್ಲಿ ಫೆ.1ರಂದು ಆಯೋಜಿಸಿರುವ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಈ ವಾರ ನಡೆಯಬೇಕಿದ್ದ ಎಐಸಿಸಿ ಚುನಾವಣಾ ಸಮಿತಿ ಸಭೆಯನ್ನು ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಸದ್ಯದಲ್ಲೇ ಅಂತಿಮಗೊಳ್ಳುತ್ತದೆ. ಆದರೆ ಸೋನಿಯಾ ಗಾಂಧಿ ಆಗಮನ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಬೇರು ಭದ್ರ: ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಅಡಿಪಾಯ ಸಂಕಷ್ಟದಲ್ಲಿದೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ. 129 ವರ್ಷಗಳ ಇತಿಹಾಸವಿರುವ ನಮ್ಮ ಪಕ್ಷದ ಬೇರು ಭದ್ರವಾಗಿದೆ ಎಂದು ಹೇಳಿದರು.

ಕರ್ನಾಟಕ ಮೊದಲಿನಿಂದಲೂ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಬಡವರ, ರೈತರ, ಕಾರ್ಮಿಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡುತ್ತಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ಮೊದಲಾದವರು ಭಾಗವಹಿಸಿದ್ದರು.ಇದರಲ್ಲಿ ಇನ್ನಷ್ಟು ಓದಿ :