ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

bengaluru| geethanjali| Last Modified ಮಂಗಳವಾರ, 20 ಜುಲೈ 2021 (18:10 IST)
ಬೆಂಗಳೂರು: ಪೂರ್ವ ಅರಬ್ಬೀಸಮುದ್ರದ ಮಹಾರಾಷ್ಟ್ರ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಜುಲೈ 23ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 24ರವರೆಗೆ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಹಲವೆಡೆ ಗುಡುಗಿನಿಂದ ಕೂಡಿದ ಭಾರಿ ಮಳೆ ನಿರೀಕ್ಷಿಸಲಾಗಿದೆ. ಜುಲೈ 21ರಂದು ಯೆಲ್ಲೋ ಅಲರ್ಟ್ ಹಾಗೂ ಜುಲೈ 22, 23ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ:
ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ನೈರುತ್ಯ ಮುಂಗಾರು ಸಕ್ರಿಯವಾಗಿತ್ತು ಹಾಗೂ ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ 12 ಸೆಂ.ಮೀ, ದಕ್ಷಿಣ ಕನ್ನಡದ ಸುಬ್ರಹ್ಮಣ್ಯದಲ್ಲಿ 7 ಸೆಂ.ಮೀ, ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ 6 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :