ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದ್ದು, ಜನ ಜಾನುವಾರುಗಳು ಪರದಾಡುವಂತಾಗಿದೆ. ಸೋಮವಾರ ರಾತ್ರಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ.