ಕೇಂದ್ರ ಸರಕಾರ ಪೆಟ್ರೋಲ್‌ಗೆ 4 ರೂಪಾಯಿ ಹಾಗೂ ಡೀಸೆಲ್‌ಗೆ 1 ರೂಪಾಯಿ ಕಡಿತಗೊಳಿಸಿ ಇಂದು ಆದೇಶ ಹೊರಡಿಸುವ ಸಾಧ್ಯತೆಗಳಿವೆ ಎಂದು ಪೆಟ್ರೋಲಿಯಂ ಖಾತೆ ಸಚಿವಾಲಯದ ಮೂಲಗಳು ತಿಳಿಸಿವೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕುಸಿದ ಹಿನ್ನೆಲೆಯಲ್ಲಿ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ, ಇಂದು ಸಂಜೆ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳ ಕಡಿತವನ್ನು ಘೋಷಿಸಲಿದೆ ಎನ್ನಲಾಗಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಪೆಟ್ರೋಲ್‌ಗೆ 5 ರೂಪಾಯಿ ಹಾಗೂ ಡೀಸೆಲ್‌ಗೆ 2 ರೂಪಾಯಿ ಕಡಿತಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು. ಜುಲೈ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತಿ ಬ್ಯಾರೆಲ್ ಕಚ್ಚಾ ತೈಲ 147 ಡಾಲರ್‌ಗಳಿಗೆ ಏರಿಕೆಯಾಗಿತ್ತು. ಪ್ರಸಕ್ತ ಅವಧಿಯಲ್ಲಿ ಪ್ರತಿ ಬ್ಯಾರೆಲ್‌ಗೆ 40 ಡಾಲರ್‌ಗಳಿಗೆ ತಲುಪಿದೆ ಎಂದು ಮಾರುಕಟ್ಟೆಯ ಮೂಲಗಳು ತಿಳಿಸಿವೆ. ಮಂಗಳವಾರದಂದು ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಮಾತನಾಡಿ, ಶೀಘ್ರದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿತವಾಗುವ ಸಾಧ್ಯತೆಗಳಿದ್ದು, ಇದರಿಂದಾಗಿ ಮತ್ತಷ್ಟು ಹಣದುಬ್ಬರ ಇಳಿಕೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದರು.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರಗಳು ಇತ್ತೀಚೆಗೆ ಇಳಿಕೆಯಾಗಿದ್ದು, ಮತ್ತಷ್ಟು ಇಳಿಕೆಯಾಗುವ ನಿರೀಕ್ಷೆಯಿದೆ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ. |