ದೇಶದ ಪ್ರಮುಖ ವಿಮಾ ಸಂಸ್ಥೆಯಾದ ಲೈಫ್ ಇನ್ಶೂರೆನ್ಸ್ ಕಾರ್ಪೋರೇಶನ್ ಆಫ್ ಇಂಡಿಯಾ ಜನೆವರಿ ತಿಂಗಳಲ್ಲಿ ಬಿಡುಗಡೆ ಮಾಡಲು ಉದ್ದೇಶಿಸಿದ್ದ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಮಾರ್ಚ್ ಅಂತ್ಯಕ್ಕೆ ಬಿಡುಗಡೆಗೊಳಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ ತಿಂಗಳಾಂತ್ಯಕ್ಕೆ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಗ್ರಾಹಕರಿಗೆ ಒದಗಿಸಲಾಗುವುದು ಎಂದು ಎಲ್‌ಐಸಿ ವಕ್ತಾರರು ತಿಳಿಸಿದ್ದಾರೆ.
ಎಲ್‌ಐಸಿ ಕರ್ನಾಟಕ ಮೂಲದ ಕಾರ್ಪೋರೇಶನ್ ಬ್ಯಾಂಕ್‌ನೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾರ್ಪೋರೇಶನ್ ಬ್ಯಾಂಕ್ ಎಲ್‌ಐಸಿ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಲಿದೆ. ಕೆಲ ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಗ್ರಾಹಕರಿಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸುವ ಮೊದಲು ಕಾರ್ಪೋರೇಶನ್ ಬ್ಯಾಂಕ್‌ಗೆ ಎಲ್ಲ ಅಡೆತಡೆಗಳನ್ನು ಸರಿಪಡಿಸುವಂತೆ ಕೋರಿದ್ದು, ನಂತರ ಯಾವುದೇ ಸಮಸ್ಯೆಗಳು ಸೃಷ್ಟಿಯಾಗದಂತೆ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.
ಕ್ರೆಡಿಟ್ ಕಾರ್ಡ್ ಕುರಿತಂತೆ ಕಾರ್ಪೋರೇಶನ್ ಬ್ಯಾಂಕ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ತಾಂತ್ರಿಕ ಹಾಗೂ ಇನ್ನಿತರ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲಾಗಿದ್ದು ಕ್ರೆಡಿಟ್ ಕಾರ್ಡ್‌ಗಳನ್ನು ಗ್ರಾಹಕರಿಗೆ ಒದಗಿಸಲು ಸಿದ್ದವಾಗಿದೆ ಎಂದು ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕ ಭಟ್ ನುಡಿದರು. |