ನಂದಿನಿ ಹಾಲಿನ ದರ ಏರಿಕೆ ಸದ್ಯಕ್ಕೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ರೈತರ ಸಂಕಷ್ಟ ಮನವರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕರ್ನಾಟಕ ಹಾಲು ಮಹಾಮಂಡಳ ಮತ್ತು ಜಿಲ್ಲಾ ಹಾಲು ಒಕ್ಕೂಟಗಳ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದರ ಹೆಚ್ಚಿಸುವಂತೆ ಮನವಿ ಕೊಟ್ಟಿದ್ದಾರೆ. ಇಂತಿಷ್ಟೇ ಸಮಯದಲ್ಲಿ ಮಾಡುತ್ತೇನೆ ಎಂದು ಹೇಳಿಲ್ಲ. ರೈತರ ಕಷ್ಟದ ಬಗ್ಗೆ ಅರಿವಿದೆ, ಆ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.
ಹಾಲಿನ ದರ ಏರಿಕೆ ಕುರಿತು ಮುಖ್ಯಮಂತ್ರಿಗಳಿಗೆ ಪ್ರಸ್ತಾಪ ಸಲ್ಲಿಸಲಾಗಿದೆ. 2-3ದಿನ ಸಮಯ ಕೊಡಿ ಎಂದು ಹೇಳಿದ್ದಾರೆ. ಆದಷ್ಟು ಬೇಗ ಮತ್ತೊಮ್ಮೆ ನಮ್ಮೊಂದಿಗೆ ಚರ್ಚಿಸಿ ದರ ಹೆಚ್ಚಳದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರ ರೆಡ್ಡಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.