ದೇಶಾದ್ಯಂತ ಈರುಳ್ಳಿ ಸಗಟು ಮಾರಾಟಗಾರರ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದು, ಈರುಳ್ಳಿ ಮಾರಾಟದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅದಾಯ ತೆರಿಗೆ ಇಲಾಖೆಯ ಮೂಲಗಳು ತಿಳಿಸಿವೆ.
ನವದೆಹಲಿ, ಚಂಡೀಗಢ್, ಹರಿಯಾಣಾ,ರಾಜಸ್ಥಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ಈರುಳ್ಳಿ ಸಗಟು ವರ್ತಕರ ಅಂಗಡಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಈರುಳ್ಳಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದಾರೆ ಎನ್ನುವ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ.
ಈರುಳ್ಳಿ ಉತ್ಪಾದನೆಯ ಪ್ರಮುಖ ಕೇಂದ್ರಗಳಾದ ಮಹಾರಾಷ್ಟ್ರದ ಲಾಸಲ್‌ಗಾಂವ್, ಪಿಂಪಲ್‌ಗಾಂವ್ ಬಸವಂತ್ ಮತ್ತು ನಾಶಿಕ್ ನಗರದಲ್ಲಿರುವ ಈರುಳ್ಳಿ ಸಗಟು ಮಳಿಗೆಗಳ ಮೇಲೆ ದಾಳಿ ನಡೆಸಲಾಗಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ದಾಳಿಯ ಬಗ್ಗೆ ಸಂಪೂರ್ಣ ವಿವರಗಳು ಲಭ್ಯವಾಗಿಲ್ಲವೆಂದು ಮೂಲಗಳು ತಿಳಿಸಿವೆ.
ಕಳೆದ ಕೆಲ ವಾರಗಳಿಂದ ಈರುಳ್ಳಿ ದರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕೇಂದ್ರದ ಸೂಚನೆಯ ಮೇರೆಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.