ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟಿಗರ ಮೇಲೆ ನಡೆದ ದಾಳಿಯ ಹಿಂದಿನ ವ್ಯಕ್ತಿಯ ಗುರುತು ಪತ್ತೆ ಹಚ್ಚಿರುವುದಾಗಿ ಪಾಕಿಸ್ತಾನ ಅಧಿಕಾರಿಗಳು ಗುರುವಾರ ತಿಳಿಸಿದ್ದು, ಆದರೆ ಯಾವುದೇ ಶಂಕಿತರ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದೆ.
ದಾಳಿಯ ಬಂಧಿತರ ಬಗ್ಗೆ ಪಂಜಾಬ್ ಪ್ರಾಂತ್ಯದ ರಾಜ್ಯಪಾಲ ಸಲ್ಮಾನ್ ತಾಸೀರ್ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದು, ಮುಂದಿನ ಕೆಲವು ದಿನಗಳಲ್ಲಿ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಮಂಗಳವಾರ ಲಾಹೋರ್‌ನ ಗಢಾಫಿ ಸ್ಟೇಡಿಯಂನತ್ತ ಬಸ್‌ನಲ್ಲಿ ತೆರಳುತ್ತಿದ್ದ ಶ್ರೀಲಂಕಾ ಕ್ರಿಕೆಟಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ ಆರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವು ಕ್ರಿಕೆಟಿಗರು ಗಾಯಗೊಂಡಿದ್ದರು.
ಅಲ್ಲದೇ ಭಾರೀ ಪ್ರಮಾಣದಲ್ಲಿ ವಿಶೇಷ ತನಿಖಾ ತಂಡದ ಅಧಿಕಾರಿಗಳು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, ಹಲವರನ್ನು ಸೆರೆಹಿಡಿದಿರುವುದಾಗಿ ಅವರು ವಿವರಿಸಿದ್ದಾರೆ. |