ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವನ್ನು ಮತ್ತಷ್ಟು ವೃದ್ದಿಗೊಳಿಸುವ ನಿಟ್ಟಿನಲ್ಲಿ ಎರಡೂ ದೇಶಗಳ ಉದ್ದೇಶಿತ ಮಾತುಕತೆ ಹೊಸದೊಂದು ಮೈಲಿಗಲ್ಲನ್ನು ನೆಟ್ಟಂತಾಗಿದೆ ಎಂದು ಅಮೆರಿಕ ಅಭಿಪ್ರಾಯವ್ಯಕ್ತಪಡಿಸಿದೆ. ಭಾರತ ಮತ್ತು ಅಮೆರಿಕ ನಡುವೆ ಗುರುವಾರದಿಂದ ಮಾತುಕತೆ ಆರಂಭಗೊಂಡಿದೆ.
ಇಂದಿನ ಮಾತುಕತೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಹಾಗೂ ಅಮೆರಿಕದ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಭಾಗವಹಿಸಲಿದ್ದು, ಅಫ್ಘಾನಿಸ್ತಾನ-ಪಾಕಿಸ್ತಾನ ಪರಿಸ್ಥಿತಿ ಹಾಗೂ ಅಮೆರಿಕ ಮತ್ತು ಭಾರತ ಜಂಟಿಯಾಗಿ ಭಯೋತ್ಪಾದನೆ ನಿಗ್ರಹಕ್ಕೆ ನೀಡಬೇಕಿರುವ ಸಹಕಾರಗಳ ಕುರಿತು ಚರ್ಚೆ ನಡೆಯಲಿದೆ.
ಇಂದಿನ ಮಾತುಕತೆ ಕುರಿತು ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ, ಭಾರತ ಮತ್ತು ಅಮೆರಿಕದ ಸಹಭಾಗಿತ್ವವನ್ನು 21ನೇ ಶತಮಾನದ ಮಹತ್ವದ ಮೈಲಿಗಲ್ಲಾಗಿದೆ ಎಂದು ಬಣ್ಣಿಸಿದ್ದಾರೆ.