ತನ್ನ ಆಡಳಿತಾವಧಿಯನ್ನು ಪೂರ್ಣಗೊಳಿಸಿದ ನಂತರವೇ ಈಜಿಪ್ಟ್ ಅಧ್ಯಕ್ಷಗಾದಿಯಿಂದ ಕೆಳಗಿಳಿಯುವುದಾಗಿ ಹೊಸ್ನಿ ಮುಬಾರಕ್(82) ಮಂಗಳವಾರ ಘೋಷಿಸಿದ್ದಾರೆ. ಕಳೆದ 30 ವರ್ಷಗಳಿಂದ ಸರ್ವಾಧಿಕಾರ ನಡೆಸುತ್ತಿರುವ ಅಧ್ಯಕ್ಷ ಹೊಸ್ನಿ ವಿರುದ್ಧ ಈಜಿಪ್ಟ್‌ನಲ್ಲಿ ಸಾರ್ವಜನಿಕರಿಂದ ಭಾರೀ ಪ್ರತಿಭಟನೆ ನಡೆಯುತ್ತಿದೆ.
ದೇಶದಲ್ಲಿನ ಜನರ ತೀವ್ರ ವಿರೋಧವನ್ನು ಪರಿಗಣಿಸಿ ಮುಬಾರಕ್ ಅಧ್ಯಕ್ಷ ಪಟ್ಟದಿಂದ ಕೆಳಗಿಳಿಯುವ ಮೂಲಕ ಅಧಿಕಾರವನ್ನು ಹಸ್ತಾಂತರಿಸಬೇಕು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರು ದೂರವಾಣಿಯಲ್ಲಿ ಹೊಸ್ನಿ ಜತೆ ಸಂಭಾಷಣೆ ನಡೆಸಿದ್ದಾರೆ. ಆ ಹಿನ್ನೆಲೆಯಲ್ಲಿ ತನ್ನ ಅಧಿಕಾರಾವಧಿ ಸೆಪ್ಟೆಂಬರ್‌ನಲ್ಲಿ ಕೊನೆಗೊಳ್ಳಲಿದ್ದು, ಆಗ ಅಧ್ಯಕ್ಷಗಾದಿಯಿಂದ ಕೆಳಗಿಳಿಯುವುದಾಗಿ ತಿಳಿಸಿದ್ದಾರೆ.
ತನ್ನ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿರುವುದಾಗಿ ಆರೋಪಿಸಿರುವ ಮುಬಾರಕ್, ತಾನು ಜನರ ಆಶಯಕ್ಕೆ ವಿರುದ್ಧವಾಗಿ ಅಧಿಕಾರದಲ್ಲಿ ಮುಂದುವರಿಯಲು ಇಚ್ಛಿಸುವುದಿಲ್ಲ. ಆದರೆ ದೇಶದಲ್ಲಿ ಮಧ್ಯಂತರ ಚುನಾವಣೆ ನಡೆಯುವುದು ಬೇಕಿಲ್ಲ. ಹಾಗಾಗಿ ತನ್ನ ಅವಧಿ ಪೂರ್ಣಗೊಂಡ ನಂತರ ಅಧಿಕಾರ ತ್ಯಜಿಸುವೆ ಎಂದು ಸುಮಾರು ಹತ್ತು ನಿಮಿಷಗಳ ಕಾಲ ಟೆಲಿವಿಷನ್‌ನಲ್ಲಿ ರಾಷ್ಟ್ರದ ಜನತೆಯನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದ್ದಾರೆ.
ಹೊಸ್ನಿ ಮುಬಾರಕ್ ಅವರ ಸರ್ವಾಧಿಕಾರವನ್ನು ವಿರೋಧಿಸಿ ಕೈರೋದಲ್ಲಿ ಸುಮಾರು ಒಂದು ಮಿಲಿಯನ್ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ರಾಜೀನಾಮೆ ನೀಡುವಂತೆ ಒತ್ತಾಯಿಸಿದರು. ಹೊಸ್ನಿ ಅಧಿಕಾರದಿಂದ ಕೆಳಗಿಳಿಯುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದರು.