ಶೀಘ್ರವೇ ಆಂದ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ನೇಮಕದ ಕುರಿತಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಆಂದ್ರ ಪ್ರದೇಶ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿ ವಹಿಸಿಕೊಂಡಿರುವ ಎಂ.ವೀರಪ್ಪ ಮೋಯಿಲಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಪೂರ್ಣವಾಗಿ ಚೇತರಿಸಿಕೊಂಡಿದ್ದು ಈ ನಿಟ್ಟಿನಲ್ಲಿ ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಮಾತ್ರ ರಾಜ್ಯದಲ್ಲಿ ಸ್ಥಿರ ಸರಕಾರ ನೀಡಬಹುದು ಎಂದು ಹೇಳಿದ ಅವರು ಬೇರು ಮಟ್ಟದಿಂದ ಪಕ್ಷವನ್ನು ಬಲಪಡಿಸಬೇಕಾದ ಅನಿವಾರ್ಯತೆ ಇದೆ.
ಯುವ ಕಾಂಗ್ರೆಸ್ ಕಾರ್ಯಕರ್ತರ ತರಬೇತಿ ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಬಲವಾಗಿ ಬೆಳೆಯುತ್ತಿದ್ದು, ಇದು ತೆಲುಗು ದೇಶಂಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದು ಹೇಳಿದರು. ಡಾ. ವೈ ಎಸ್ ರಾಜಶೇಖರ ರೆಡ್ಡಿ ಕೈಗೆತ್ತಿಕೊಂಡಿರುವ ಜನಪರ ಯೋಜನೆಗಳನ್ನು ಯುವ ಕಾರ್ಯಕರ್ತರು ಜನರಿಗೆ ತಲುಪಿಸಬೇಕಿದೆ ಎಂದು ಕರೆ ನೀಡಿದರು.
ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದ ಮುಖ್ಯಮಂತ್ರಿ ವೈ. ಎಸ್ ರಾಜಶೇಖರ್ ರೆಡ್ಡಿ ಅವರು ಯುಗಾದಿ ಹಬ್ಬದ ನಂತರ ಎರಡು ರೂಪಾಯಿಗೆ ಕೆಜಿ ಅಕ್ಕಿ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೊಳಿಸಲಿದೆ. ಆಡಳಿತ ಪಕ್ಷದ ಸಮಗ್ರ ಅಭಿವೃದ್ದಿ ಯೋಜನೆಯನ್ನು ಅರಗಿಸಿಕೊಳ್ಳಲಾಗದ ತೆಲುಗು ದೇಶಂ ಆಡಳಿತ ಪಕ್ಷದ ವಿರುದ್ಧ ನಿರಾಧಾರ ಆರೋಪ ಮಾಡುತ್ತಿದೆ ಎಂದು ಟೀಕಿಸಿದರು.
|