ಕನ್ನಡ ಮತ್ತು ತೆಲುಗು ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡುವ ಬಗ್ಗೆ ಕೇಂದ್ರ ಸರಕಾರ ಪರಿಶೀಲನೆ ನಡೆಸುತ್ತಿದೆ ಎಂದು ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವೆ ಅಂಬಿಕಾ ಸೋನಿ ಹೇಳಿದ್ದಾರೆ.
ಸಚಿವೆ ಸೋನಿ ಹಾಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ನಡುವೆ ನಡೆದ ಮಾತುಕತೆಯ ವೇಳೆ ಈ ವಿಚಾರ ಪ್ರಸ್ತಾಪವಾಗಿದೆ. ಕನ್ನಡ ಮತ್ತು ತೆಲುಗು ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಬಗ್ಗೆ ತಜ್ಞರ ಸಮಿತಿ ಪರಿಶೀಲನೆ ನಡೆಸುತ್ತಿದ್ದು, ಸಮಿತಿಯ ಸದಸ್ಯರ ನಡುವೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ ಎಂಬ ವಿಚಾರವನ್ನು ಈ ವೇಳೆ ಅಂಬಿಕಾ ಸೋನಿ ತಿಳಿಸಿದ್ದಾರೆ.
ಶೀಘ್ರದಲ್ಲೇ ತಜ್ಞರ ಸಮಿತಿ ವರದಿ ಸಲ್ಲಿಸಲಿದೆ ಎಂಬ ಭರವಸೆಯನ್ನು ವ್ಯಕ್ತಪಡಿಸಿರುವ ಸಚಿವೆ, ಸಮಿತಿ ವರದಿ ನೀಡಿದ ಕೂಡಲೇ ಸೂಕ್ತ ಕ್ರಮಕ್ಕಾಗಿ ಅದನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಹೇಳಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಇದುವರೆಗೆ ತಮಿಳು ಭಾಷೆಗೆ ಮಾತ್ರ ಶಾಸ್ತ್ರೀಯ ಭಾಷೆಯ ಸ್ಥಾನ ನೀಡಲಾಗಿದೆ. ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ, ಹಲವಾರು ಪ್ರತಿಭಟನೆಗಳು ಚಳವಳಿಗಳು ರಾಜ್ಯದಲ್ಲಿ ನಡೆದಿದ್ದು, ಇವಗಳು ಫಲ ನೀಡುವ ದಿನಗಳು ಹತ್ತಿರವಾಗಿವೆ.
|