ಗುಜರಾತ್‌ನ ಕೋಮು ಸೂಕ್ಷ್ಮ ಪ್ರದೇಶವಾದ ಮೊದಾಸಾದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಪ್ರಬಲ ಬಾಂಬ್ ಸ್ಫೋಟದ ಬಳಿಕ ಇದೀಗ ಮಂಗಳವಾರದಂದು ರಾಜ್ಯಾದ್ಯಂತ ಹೈ ಅಲರ್ಟ್‌ಗೆ ಆದೇಶ ನೀಡಿದ್ದು,ಎಲ್ಲೆಡೆ ಬಿಗಿಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಭದ್ರತಾ ಏಜೆನ್ಸಿಯ ಅಧಿಕಾರಿಗಳು ಹೇಳಿದ್ದಾರೆ. ಮೊದಾಸಾದಲ್ಲಿ ಬಾಂಬ್ ಸ್ಫೋಟ ಸಂಭವಿಸುವ ಬಗ್ಗೆ ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು ಎಂಬ ಹೇಳಿಕೆಯನ್ನು ರಾಜ್ಯ ಗೃಹ ಸಚಿವ ಅಮಿತ್ ಶಾ ಅವರು ನಿರಾಕರಿಸಿದ್ದಾರೆ.
ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಅಹಮದಾಬಾದ್‌ನಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು, 55ಮಂದಿ ಬಲಿಯಾಗಿದ್ದರು.ಇದೀಗ ಎರಡು ತಿಂಗಳ ಬಳಿಕ ಮೊದಾಸಾದಲ್ಲಿ ಸ್ಫೋಟ ನಡೆದಿರುವುದಾಗಿ ತಿಳಿಸಿದರು.
ಭಾನುವಾರವಷ್ಟೇ ಅಹಮದಾಬಾದ್‌ನ ಕೋಮುಸೂಕ್ಷ್ಮ ಪ್ರದೇಶವಾದ ಕಾಲುಪುರದ್ರಾವಾಜಾದಲ್ಲಿ 17 ಜೀವಂತ ಕಚ್ಚಾ ಬಾಂಬ್‌ಗಳು ಪತ್ತೆಯಾಗಿದ್ದು, ಅದನ್ನು ಯಶಸ್ವಿಯಾಗಿ ನಿಷ್ಕ್ರಿಯಗೊಳಿಸಲಾಗಿತ್ತು. |
|