ಒರಿಸ್ಸಾದಲ್ಲಿ ದಿನದಿಂದ ದಿನಕ್ಕೆ ಕೋಮು ಹಿಂಸಾಕಾಂಡ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿರುವುದಾಗಿ ಗೃಹ ಸಚಿವ ಶಿವರಾಜ್ ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕಂಧಮಾಲ್ ಸೇರಿದಂತೆ ರಾಜ್ಯದ ವಿವಿಧೆಡೆ ಭುಗಿಲೆದ್ದಿರುವ ಹಿಂಸಾಚಾರವನ್ನು ಮಟ್ಟ ಹಾಕಿ, ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸರ್ಕಾರ ವಿಫಲವಾಗಿರುವ ಈ ಕಾರಣದಿಂದಾಗಿ ರಾಷ್ಟ್ರಪತಿ ಆಡಳಿತ ಹೇರುವತ್ತ ಸಮಾಲೋಚನೆ ನಡೆಸುತ್ತಿರುವುದಾಗಿ ಅವರು ಹೇಳಿದರು.
ರಾಜ್ಯದಲ್ಲಿನ ಪರಿಸ್ಥಿತಿ ಕುರಿತು ಶೀಘ್ರವೇ ವರದಿ ಸಲ್ಲಿಸುವಂತೆ ರಾಜ್ಯಪಾಲರಿಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿರುವುದಾಗಿಯೂ ಪಾಟೀಲ್ ಈ ಸಂದರ್ಭದಲ್ಲಿ ತಿಳಿಸಿದರು.
ಎನ್‌ಡಿ ಟಿವಿಯೊಂದಿಗೆ ಮಾತನಾಡಿದ ಪಾಟೀಲ್ ಅವರು,ಈಗಾಗಲೇ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರುವಂತೆ ಆರು ಎಚ್ಚರಿಕೆಯ ನೋಟಿಸ್ ಅನ್ನು ಜಾರಿಗೊಳಿಸಲಾಗಿತ್ತು ಎಂದು ಹೇಳಿದರು.
ಸಂವಿಧಾನಬದ್ಧವಾಗಿ ಕಾರ್ಯಾಚರಿಸುವಲ್ಲಿ ಒರಿಸ್ಸಾ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿದ ಅವರು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದರೆ ರಾಷ್ಟ್ರಪತಿ ಆಡಳಿತ ಹೇರುವ ಎಲ್ಲಾ ಲಕ್ಷಣಗಳು ಕಂಡುಬಂದಿರುವುದಾಗಿ ನುಡಿದರು.
ರಾಜ್ಯದಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಬಿಎಸ್‌ಎಫ್‌ನ 77ಕಂಪೆನಿ ಮತ್ತು ಸಿಆರ್‌ಪಿಎಫ್ ಜವಾನರನ್ನು ಕಳುಹಿಸಿರುವುದಾಗಿ ತಿಳಿಸಿದರು.
|