ಕಾಂಗ್ರೆಸ್ ವಿರುದ್ಧ ಬಂಡಾಯವೆದ್ದ ಹಿರಿಯ ನಾಯಕಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಾರ್ಗರೆಟ್ ಆಳ್ವ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಬುಧವಾರ ಸ್ವೀಕರಿಸಿದೆ. ಅವರನ್ನು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯಿಂದಲೂ ಕೈಬಿಡಲಾಗಿದೆ.
ಮಾರ್ಗರೆಟ್ ಆಳ್ವ ಅವರ ರಾಜೀನಾಮೆಯನ್ನು ಸ್ವೀಕರಿಸಿರುವುದಾಗಿ ತಿಳಿಸಿರುವ ಕಾಂಗ್ರೆಸ್ ವಕ್ತಾರೆ ಜಯಂತಿ ನಟರಾಜನ್, ಆಳ್ವರನ್ನು ಪದತ್ಯಾಗ ಮಾಡುವಂತೆ ಹೇಳಿಲ್ಲ; ಅವರು ತಾನಾಗಿಯೇ ರಾಜೀನಾಮೆ ನೀಡಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಆಳ್ವ ಮಂಗಳವಾರ ತಮ್ಮ ರಾಜೀನಾಮೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದು, ಅವರ ರಾಜೀನಾಮೆಯನ್ನು ಸ್ವೀಕರಿಸಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ಪಕ್ಷದೊಳಗೆ ಸ್ವಜನಪಕ್ಷಪಾತ ನಡೆಯುತ್ತಿದೆ ಎಂದು ಇತ್ತೀಚೆಗೆ ಆರೋಪಿಸಿದ್ದ ಆಳ್ವ, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಟಿಕೆಟ್‌ಗಳು ಮಾರಾಟವಾಗಿವೆ ಎಂಬ ಗಂಭೀರ ಆರೋಪ ಮಾಡಿದ್ದರು.
ಆಳ್ವ ಆರೋಪದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುವುದೇ ಎಂದು ಕೇಳಲಾಗಿರುವ ಪ್ರಶ್ನೆಗೆ ಉತ್ತರಿಸಿರುವ ಜಯಂತಿ ನಟರಾಜನ್, ಇಂತಹ ಆಧಾರ ರಹಿತ ಹೇಳಿಕೆಗಳ ಕುರಿತು ತನಿಖೆ ನಡೆಸುವ ಪ್ರಶ್ನೆಯೇ ಇಲ್ಲ ಎಂದು ತಳ್ಳಿ ಹಾಕಿದ್ದಾರೆ. |