ಮುಖ್ಯಮಂತ್ರಿ ಹುದ್ದೆಯಿಂದ ವಂಚಿತರಾಗಿರುವ ಕಾಂಗ್ರೆಸ್‌ನ ನಾರಾಯಣ ರಾಣೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಪರಿಣಾಮ ಅವರನ್ನು ಶನಿವಾರ ಪಕ್ಷದಿಂದ ಅಮಾನತು ಮಾಡಲಾಗಿದೆ.
ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ಪ್ರಕಟಣೆ ಹೊರ ಬೀಳುತ್ತಿದ್ದಂತೆಯೇ ನಾರಾಯಣ ರಾಣೆ ಅವರು ಪಕ್ಷದ ವಿರುದ್ಧ ಸಾರ್ವಜನಿಕವಾಗಿ ಹೇಳಿಕೆ ನೀಡಿದ್ದರು. ಇದು ಕಾಂಗ್ರೆಸ್ ಗೌರವಕ್ಕೆ ದಕ್ಕೆ ತರುತ್ತದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಕೂಡಲೇ ಜಾರಿಗೆ ಬರುವಂತೆ ರಾಣೆ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ದ್ವಿವೇದಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ತಮ್ಮನ್ನು ಮುಖ್ಯಮಂತ್ರಿ ಮಾಡುವುದಾಗಿ ಆಶ್ವಾಸನೆ ನೀಡಿಯೂ, ಕೊನೆಗೆ ಅಶೋಕ್ ಚವಾಣ್ ಅವರನ್ನು ಸಿಎಂ ಪಟ್ಟಕ್ಕೆ ಏರಿಸುವ ಮೂಲಕ ವಿಶ್ವಾಸದ್ರೋಹ ಎಸಗಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. |