ಲೋಕಸಭಾ ಚುನಾವಣೆಗೆ ವೇದಿಕೆ ಸಜ್ಜುಗೊಳಿಸುತ್ತಿರುವ ಬಿಜೆಪಿ, ಒಂದು ವೇಳೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ದೇಶದಿಂದ ಭಯೋತ್ಪಾದನೆಯನ್ನು ಮಟ್ಟಹಾಕಲು ಬಿಜೆಪಿ ಬದ್ದವಾಗಿದೆ ಎಂದು ಪ್ರಧಾನಿ ಅಭ್ಯರ್ಥಿಯಾಗಿರುವ ಎಲ್.ಕೆ.ಆಡ್ವಾಣಿ ತಿಳಿಸಿದ್ದಾರೆ.
ಎಷ್ಟೇ ಬೆಲೆ ತೆತ್ತಾದರು ಭಯೋತ್ಪಾದನೆಯನ್ನು ಮಟ್ಟ ಹಾಕಬೇಕಾಗಿದೆ ಎಂದು, ಎರಡು ದಿನಗಳ ಭೇಟಿಗಾಗಿ ಇಲ್ಲಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಅಲ್ಲದೇ ದೇಶದ ಆರ್ಥಿಕ ಸ್ಥಿತಿಯನ್ನು ಮತ್ತಷ್ಟು ಬಲಗೊಳಿಸಲು ಬೃಹತ್ ಬಂಡವಾಳ ಹೂಡಿಕೆ ಮಾಡಬೇಕಾಗಿದೆ. ಈಗಾಗಲೇ ದೇಶ ನಿರುದ್ಯೋಗ ಸಮಸ್ಯೆ ಎದುರಿಸುತ್ತಿದೆ, ಅದರಲ್ಲೂ ಮುಖ್ಯವಾಗಿ ಅಸಂಘಟಿತ ಸಂಸ್ಥೆಗಳಲ್ಲಿನ ಕಾರ್ಮಿಕರು ಎಂಬುದಾಗಿ ಒತ್ತಿ ಹೇಳಿದರು.
ಆ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಯುವ ಜನರು ಸಕ್ರೀಯವಾಗಿ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಕೈಜೋಡಿಸಬೇಕಾಗಿದೆ ಎಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸುವಾಗ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ನಡುವಿನ ಕಾರ್ಯವೈಖರಿಯನ್ನು ಹೋಲಿಸಿ ನೋಡುತ್ತಾರೆ ಎಂದರು. |