ಪ್ರೇಮಿಗಳ ದಿನಾಚರಣೆಗೆ (ಫೆ.14) ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮಸೇನೆ ಎಚ್ಚರಿಕೆ ನೀಡಿದ್ದರೆ, ಮಹಾರಾಷ್ಟ್ರದಲ್ಲಿ ಶಿವಸೇನೆ ಕೂಡ ಗರ್ಜಿಸುವ ಮೂಲಕ ಮುಂಬೈಯಾದ್ಯಂತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ಭಾಗದಲ್ಲೂ ಅಹಿತಕರ ಘಟನೆ ನಡೆಯದಂತೆ ತಡೆಯುವ ನಿಟ್ಟಿನಲ್ಲಿ ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರತಿಯೊಬ್ಬರಿಗೂ ಅವರವರ ಭಾವನೆಗಳನ್ನು ವ್ಯಕ್ತಪಡಿಸಲು ಸ್ವಾತಂತ್ರ್ಯ ಇದೆ. ಹಾಗೇ ಯಾರಾದರೂ ಕಾನೂನನ್ನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಕಮೀಷನರ್ ಹಸನ್ ಗಫೂರ್ ಎಚ್ಚರಿಕೆ ನೀಡಿದ್ದಾರೆ.
ವ್ಯಾಲೆಂಟೈನ್ ಡೇ ಬಗ್ಗೆ ವಿರೋಧ ವ್ಯಕ್ತಪಡಿಸುವುದಿದ್ದರೆ ಶಾಂತಿಯುತವಾಗಿ ಮಾಡಲು ಅವಕಾಶ ಇದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಶಿವಸೇನೆ ಹಾಗೂ ಇನ್ನಿತರ ಹಿಂದೂಪರ ಸಂಘಟನೆಗಳು ಪ್ರೇಮಿಗಳ ದಿನಾಚರಣೆ ವಿರುದ್ಧ ಪ್ರತಿಭಟನೆ ನಡೆಸಲು ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದರು. |