ಲೋಕಸಭೆ ಚುನಾವಣೆಗಳು ಶಾಂತಿ ಸುವ್ಯವಸ್ಥೆಯಿಂದ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ, ಯಾವ ಕಾರಣಕ್ಕೂ ಭಯಪಡುವ ಅಗತ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಪಿ. ಚಿದಂಬರಂ ಅವರು ಭರವಸೆ ನೀಡಿದ್ದಾರೆ. ಲೋಕಸಭೆ ಚುನಾವಣೆ ಸಮಯದಲ್ಲಿ ಭಯೋತ್ಪಾದನಾ ದಾಳಿ ನಡೆಸುವ ಸಂಚು ಹೂಡಲಾಗಿದೆ ಎಂದು ಕೇಂದ್ರ ಗುಪ್ತಚರ ಇಲಾಖೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಅವರ ಈ ಭರವಸೆ ಹೊರಬಿದ್ದಿದೆ.
ಗುರುವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಚಿದಂಬರಂ, ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು. ಶಾಂತಿಯುತವಾಗಿ ಚುನಾವಣೆಗಳನ್ನು ನಡೆಸಲು ಬೇಕಾಗಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅಗತ್ಯ ಭದ್ರತೆ ವ್ಯವಸ್ಥೆಯನ್ನು ಈಗಾಗಲೇ ಅಂದಾಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಲೋಕಸಭೆ ಚುನಾವಣೆಗಳನ್ನು ಮುಗಿಸಲಾಗುವುದು ಎಂದು ಅವರು ಭರವಸೆ ನೀಡಿದರು.
"ಏಕತೆಯಿಂದ ಭಯೋತ್ಪಾದಕರ ವಿರುದ್ಧ ಹೋರಾಡಬೇಕಾದ ಅವಶ್ಯಕತೆ ಇದೆ. ಆದರೆ, ಕೆಲ ರಾಜಕೀಯ ಪಕ್ಷಗಳು ಕೋಮುಭಾವನೆ ಕೆರಳಿಸಿ ದೇಶ ವಿಭಜಿಸುವ ಕೆಲಸದಲ್ಲಿ ನಿರತವಾಗಿವೆ" ಎಂದು ಪರೋಕ್ಷವಾಗಿ ಬಿಜೆಪಿ ಮೇಲೆ ಕಿಡಿಕಾರಿದರು.
ಎಲ್ಲಾ ವಿವಿಐಪಿಗಳಿಗೂ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಸಚಿವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. |