ಕರ್ನಾಟಕ-ಮಹಾರಾಷ್ಟ್ರ ನಡುವಣ ದೀರ್ಘ ಕಾಲದ ಗಡಿ ವಿವಾದವನ್ನು ನ್ಯಾಯಾಲಯದ ಹೊರಗೆ ಪರಿಹರಿಸಿಕೊಳ್ಳುವುದಕ್ಕೆ ಮಹಾರಾಷ್ಟ್ರ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ಗುರುವಾರ ಹೇಳಿಕೆ ನೀಡಿದ್ದಾರೆ.
ಮಹಾರಾಷ್ಟ್ರ ರಾಜ್ಯ ರಚನೆಯ ಸುವರ್ಣ ವರ್ಷಾಚರಣೆ ಸಂದರ್ಭದಲ್ಲಿ ಈ ವಿವಾದಕ್ಕೆ ಪರಿಹಾರ ಕಂಡುಹಿಡಿಯಲು ನಾವು ಬಯಸಿದ್ದೇವೆ. ನಮ್ಮ ಸರಕಾರವು ಕರ್ನಾಟಕದ ಸಹಕಾರದೊಂದಿಗೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ಇರಾದೆ ಹೊಂದಿದೆ ಎಂದು ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯ ಸಂದರ್ಭ ವಿಧಾನಸಭೆಯ ಜಂಟಿ ಸಮಾವೇಶದಲ್ಲಿ ಮುಖ್ಯಮಂತ್ರಿ ಚವಾಣ್ ಹೇಳಿದರು.
ಇದೇ ವೇಳೆ, ಬೆಳಗಾವಿ, ಕಾರವಾರ, ನಿಪ್ಪಾಣಿ ಮತ್ತು ಇತರ ಮಹಾರಾಷ್ಟ್ರ-ಕರ್ನಾಟಕ ಗಡಿ ಪ್ರದೇಶಗಳಲ್ಲಿ ಮರಾಠಿಗರ ಮೇಲಾಗುತ್ತಿರುವ ಅನ್ಯಾಯವನ್ನು ಮಹಾರಾಷ್ಟ್ರವೆಂದಿಗೂ ಸಹಿಸದು ಎಂದೂ ಅವರು ಎಚ್ಚರಿಕೆ ನೀಡಿದರು.
ಈ ವಿಷಯದಲ್ಲಿ ರಾಜಿ ಇಲ್ಲ ಎಂದ ಚವಾಣ್, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದಲ್ಲಿರುವುದರಿಂದ ಅದನ್ನು ಮಾತುಕತೆಗೆ ಆಹ್ವಾನಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರದ ಪ್ರತಿಪಕ್ಷಗಳಾದ ಬಿಜೆಪಿ-ಶಿವಸೇನೆ ಮಿತ್ರಕೂಟಕ್ಕೆ ಮನವಿ ಮಾಡಿಕೊಂಡರು.
ಕರ್ನಾಟಕ ಜೊತೆಗೆ ಸಹಮತ ಮತ್ತು ಸಹಕಾರದ ಉದ್ದೇಶ ನಮ್ಮದು. ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಅದರ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಎಂದು ಅವರು ನುಡಿದರು. |