ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪೂರ್ಣ ಬಹುಮತದೊಂದಿಗೆ ಹ್ಯಾಟ್ರಿಕ್ ಜಯಭೇರಿ ಬಾರಿಸಿರುವ ಕಾಂಗ್ರೆಸ್ ಇದೀಗ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಬೇಕೆಂಬ ಮುಸುಕಿನ ಗುದ್ದಾಟದಲ್ಲಿ ತೊಡಗಿದೆ. ಆದರೆ ಮುಖ್ಯಮಂತ್ರಿಯನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಅಶೋಕ್ ಚವಾಣ್ ತಿಳಿಸಿದ್ದಾರೆ.
ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ. ಸೋನಿಯಾಗಾಂಧಿ ಅವರು ಇದನ್ನು ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಸಾಮೂಹಿಕ ನಾಯಕತ್ವ ಮತ್ತು ಸೋನಿಯಾಗಾಂಧಿ ಅವರ ಮುಂದಾಳತ್ವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ತೃತೀಯ ಬಾರಿಗೆ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಸಫಲವಾಗಿದೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತ ವಿವರಿಸಿದರು.
ಏತನ್ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕಿ ಜಯಂತಿ ನಟರಾಜನ್ ಅವರು ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ದೇಶನದಂತೆ ಪಕ್ಷದ ಹಿರಿಯ ಮುಖಂಡರು ಹಾಗೂ ನೂತನವಾಗಿ ಆಯ್ಕೆಯಾದ ಶಾಸಕರು ನಿರ್ಧರಿಸುತ್ತಾರೆ ಎಂದು ತಿಳಿಸಿದರು.