ಪಂಚಾಯತ್ ವ್ಯವಸ್ಥೆಯಲ್ಲಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಮಹಿಳೆಯರಿಗೆ ಶೇಕಡಾ 50ರಷ್ಟು ಮೀಸಲಾತಿ ನಿಗದಿಪಡಿಸುವ ಉದ್ದೇಶದ ಮಸೂದೆಯನ್ನು ಗುರುವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.
ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸಿದ ಸಂವಿಧಾನದ 110ನೇ ತಿದ್ದುಪಡಿ ಮಸೂದೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ಯ ಸಚಿವ ಸಿ.ಪಿ.ಜೋಶಿ ಮಂಡಿಸಿದರು.
ಸಂವಿಧಾನದ ಅನುಚ್ಛೇದ 243-ಡಿಗೆ ತಿದ್ದುಪಡಿ ತರುವ ಉದ್ದೇಶದ ಮಸೂದೆಯು ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಪಂಚಾಯತ್ ವ್ಯವಸ್ಥೆಯ ಎಲ್ಲಾ ಹಂತಗಳಲ್ಲಿ ಶೇಕಡಾ 50ರಷ್ಟು ಮೀಸಲಾತಿಯನ್ನು ಒದಗಿಸಲಿದೆ.
ಪಂಚಾಯತ್ ವ್ಯವಸ್ಥೆಯಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು ಈ ಮಸೂದೆಯ ಉದ್ದೇಶ ಎಂದು ಹೇಳಲಾಗಿದೆ.