ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಭಾರತವು, ಚೀನಾದ ಗಡಿಗೆ ಹೊಂದಿಕೊಂಡಿರುವ ಲಡಖ್ ಪ್ರದೇಶದ ಡೇಮ್‌ಚೌಕ್‌ನಲ್ಲಿ ನಿರ್ಮಿಸುತ್ತಿರುವ ರಸ್ತೆ ಕಾಮಗಾರಿಗೆ ಚೀನಾ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದು ಈ ಹಿನ್ನೆಲೆಯಲ್ಲಿ ಕಾಮಗಾರಿ ಸ್ಥಗಿತಗೊಂಡಿದೆ. ಕಳೆದ ಒಂದು ತಿಂಗಳ ಹಿಂದೆ ಈ ಪ್ರದೇಶದಲ್ಲಿ ಚೀನಾ ಸೈನಿಕರು ಅತಿಕ್ರಮ ಪ್ರವೇಶ ಮಾಡಿ ರಸ್ತೆ ಅಭಿವೃದ್ಧಿ ಕಾರ್ಯಕ್ಕೆ ತಡೆಯುಂಟು ಮಾಡಿದ್ದಾರೆ.
ಭಾರತದ ಗಡಿಯಲ್ಲಿರುವ ಡೇಮ್‌ಚೌಕ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಪ್ರದೇಶ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿಯೇ ಇದ್ದು, ಲೇಹ್‌ನಿಂದ ಸುಮಾರು ಮುನ್ನೂರು ಕಿ.ಮೀ ಆಗ್ನೇಯಕ್ಕಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗಡಿ ಪ್ರದೇಶದ ಕೊನೆಯ ಎರಡು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಪಡಿಸುವ ವೇಳೆಯಲ್ಲಿ ಚೀನಾ ಸೈನಿಕರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಈಗ ಕಾಮಗಾರಿ ಸ್ಥಗಿತಗೊಂಡಿದೆ.
ಸುಮಾರು 3.8 ಕಿ.ಮೀ. ರಸ್ತೆಯ ಅಭಿವೃದ್ಧಿಯ ಬಳಿಕ ಚೀನಾ ಸೇನೆಯು ಮಾತುಕತೆಗೆ ಆಹ್ವಾನಿಸಿತು. ಈ ಸಂದರ್ಭದಲ್ಲಿ ಭಾರತ ರಸ್ತೆ ಅಭಿವೃದ್ಧಿ ಪಡಿಸುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತ ಪಡಿಸಿ, ಇದು ತಮ್ಮ ಗಡಿ ಪ್ರದೇಶವಾಗಿದ್ದು, ಇಲ್ಲಿ ಯಾವುದೇ ರಸ್ತೆ ಅಭಿವೃದ್ಧಿ ಪಡಿಸುವ ಅಗತ್ಯ ಇಲ್ಲ ಎಂದು ಪ್ರತಿಪಾದಿಸಿರುವುದಾಗಿ ಮೂಲಗಳು ತಿಳಿಸಿವೆ.