ಕರ್ನಾಟಕ ಪ್ರವಾಸೋದ್ಯಮ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿಯ ಅಕ್ರಮ ಗಣಿಗಾರಿಕೆಯ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಆಂಧ್ರಪ್ರದೇಶದ ಕೋರಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ಆಂಧ್ರಪ್ರದೇಶದ ಅನಂತಪುರನಲ್ಲಿ ರೆಡ್ಡಿ ಸಹೋದರರು ನಡೆಸುತ್ತಿರುವ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆ ನಡೆಸುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ರೋಸಯ್ಯ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು. ಆಂಧ್ರದ ಶಿಫಾರಸಿನಂತೆ ಇದೀಗ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಅಸ್ತು ಎಂದಿದೆ.
ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ರೆಡ್ಡಿ ಸಹೋದರರು ಅಕ್ರಮ ಗಣಿಗಾರಿಕೆ ಮೂಲಕ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ,ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು,ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ತೀವ್ರ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರಜಾರಾಜ್ಯಂ ಮುಖ್ಯಸ್ಥ ಚಿರಂಜೀವಿ ಕೂಡ ಸಾಥ್ ನೀಡಿದ್ದರು. ಕೊನೆಗೂ ಪ್ರತಿಪಕ್ಷಗಳ ಒತ್ತಡ ಮಣಿದ ಆಂಧ್ರ ಮುಖ್ಯಮಂತ್ರಿ ರೋಸಯ್ಯ ಅಕ್ರಮ ಗಣಿಗಾರಿಕೆಯನ್ನು ಸಿಬಿಐ ತನಿಖೆ ನಡೆಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದರು.
ಆ ನಿಟ್ಟಿನಲ್ಲಿ ರೆಡ್ಡಿ ಒಡೆತನದ ಮೂರು ಕಂಪನಿ ಸೇರಿದಂತೆ ಒಟ್ಟು ಆರು ಕಂಪನಿಗಳ ವಿರುದ್ಧ ಸಿಬಿಐ ತನಿಖೆ ನಡೆಸಲಿದೆ. ಇದರಲ್ಲಿ ಬಳ್ಳಾರಿಯಲ್ಲಿ ನಡೆಸುತ್ತಿರುವ ಅಕ್ರಮ ಗಣಿಗಾರಿಕೆ ಬಗ್ಗೆಯೂ ಸಿಬಿಐ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದೆ.