ಪ್ರತ್ಯೇಕ ತೆಲಂಗಾಣ ರಾಜ್ಯ ಸ್ಥಾಪನೆಗೆ ಕೇಂದ್ರ ಸರ್ಕಾರ ಏಕಾಏಕಿ ಅಸ್ತು ಎಂದಿರುವುದನ್ನು ಸ್ವತಃ ಆಂಧ್ರಪ್ರದೇಶದ ಆಡಳಿತಾರೂಢ ಕಾಂಗ್ರೆಸ್ ಶಾಸಕರೇ ವಿರೋಧಿಸಿ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಇಕ್ಕಟ್ಟಿನ ಸ್ಥಿತಿಗೆ ತಲುಪಿದೆ. ಆ ಹಿನ್ನೆಲೆಯಲ್ಲಿ ಇದೇ ಸ್ಥಿತಿ ಮುಂದುವರಿದರೆ ವಿಧಾನಸಭೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇರುವುದಾಗಿ ಮೂಲಗಳು ತಿಳಿಸಿವೆ.
ಪ್ರತ್ಯೇಕ ತೆಲಂಗಾಣಕ್ಕಾಗಿ ಆಗ್ರಹಿಸಿ ಟಿಆರ್‌ಎಸ್ ವರಿಷ್ಠ ಚಂದ್ರಶೇಖರ್ ರಾವ್ ಅಮರಣಾಂತ ಉಪವಾಸ ಕೈಗೊಂಡಿದ್ದರು. ಈ ಸಂದರ್ಭದಲ್ಲಿಯೇ ತೆಲಂಗಾಣ, ಹೈದರಾಬಾದ್ ಪ್ರಾಂತ್ಯದಲ್ಲಿ ವ್ಯಾಪಕ ಹಿಂಸಾಚಾರ ನಡೆದಿತ್ತು. ತದನಂತರ ಸಂಸತ್ ಅಧಿವೇಶನದಲ್ಲಿ ಬಿಜೆಪಿ, ಎಡಪಕ್ಷ ಸಂಸದರ ಒತ್ತಡಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಗ್ರೀನ್ ಸಿಗ್ನಲ್ ನೀಡಿತ್ತು.
ಆದರೆ ಕೇಂದ್ರ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಶಾಸಕರೇ ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಆಂಧ್ರಪ್ರದೇಶದ ರೋಸಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೀವ್ರ ಬಿಕ್ಕಟ್ಟಿಗೆ ಸಿಲುಕಿದಂತಾಗಿದೆ. ಅಲ್ಲದೇ, ತೆಲಂಗಾಣ ವಿರೋಧಿ ಹೋರಾಟ ಮುಂದುವರಿದಿದ್ದು, ಹಿಂಸಾಚಾರ ಮುಂದುವರಿದಿದೆ.
ತೆಲಂಗಾಣ ಪ್ರತ್ಯೇಕ ರಾಜ್ಯ ವಿರೋಧಿಸಿ ಕಾಂಗ್ರೆಸ್ ಶಾಸಕ, ಸಂಸದರ ರಾಜೀನಾಮೆ ಮುಂದುವರಿದಿರುವ ನಿಟ್ಟಿನಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಸಾಧ್ಯತೆ ಇದೆ.