ಅನಂತಪುರನಲ್ಲಿನ ಕರ್ನಾಟಕ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಚಟುವಟಿಕೆ ನಿಷೇಧಿಸಿ ಆಂಧ್ರ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆ ನೀಡಿದ ಬೆನ್ನಲ್ಲೇ ಓಎಂಸಿ ವಿರುದ್ಧದ ಸಿಬಿಐ ತನಿಖೆಗೂ ಕೂಡ ಆಂಧ್ರ ಹೈಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಜನಾರ್ದನ ರೆಡ್ಡಿ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಕುರಿತು ಸಿಬಿಐ ತನಿಖೆಗೆ ಆಂಧ್ರಪ್ರದೇಶ ಹೈಕೋರ್ಟ್ ಆರು ವಾರಗಳ ಕಾಲ ತಡೆಯಾಜ್ಞೆ ನೀಡಿದೆ.
ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಆಂಧ್ರ ಹೈಕೋರ್ಟ್ ಸಿಬಿಐ ತನಿಖೆ ಸಂಬಂಧಿಸಿದಂತೆ ತಡೆ ನೀಡಿ ಮಧ್ಯಂತರ ಆದೇಶ ಕೊಟ್ಟಿದೆ.
ಗಡಿ ಒತ್ತುವರಿ, ಅಕ್ರಮ ಗಣಿಗಾರಿಕೆ ಬಗ್ಗೆ ತನಿಖೆ ನಡೆಸಿರುವುದಾಗಿ ಆಂಧ್ರಪ್ರದೇಶ ಸರ್ಕಾರ ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟಿದ್ದು, ಮುಂದಿನ ವಿಚಾರಣೆಯನ್ನು ಡಿ.29ಕ್ಕೆ ಮುಂದೂಡಿದೆ.
ಅಕ್ರಮ ಗಣಿಗಾರಿಕೆ ಕುರಿತಂತೆ ವಿಪಕ್ಷಗಳ ಒತ್ತಡಕ್ಕೆ ಮಣಿದಿದ್ದ ಆಂಧ್ರ ಸರ್ಕಾರ ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಿತ್ತು. ಅಲ್ಲದೇ, ಸಿಬಿಐನಿಂದ ನೇಮಕವಾದ ಕೇಂದ್ರ ಉನ್ನತಾಧಿಕಾರ ಸಮಿತಿ ಶಿಫಾರಸಿನ ಮೇರೆಗೆ ಓಎಂಸಿ ಗಣಿಗಾರಿಕೆ ಚಟುವಟಿಕೆ ನಿಷೇಧಿಸಿ ಆಂಧ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಆಂಧ್ರ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಜನಾರ್ದನ ರೆಡ್ಡಿ ಹೈಕೋರ್ಟ್ ಮೊರೆ ಹೋಗಿದ್ದರು. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ಆಂಧ್ರ ಸರ್ಕಾದ ಆದೇಶಕ್ಕೆ ತಡೆ ನೀಡಿತ್ತು.