ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಸಾರಾಯಿ, ಲಾಟರಿ ನಿಷೇಧ ಹಾಗೂ ಸಾಲ ಮನ್ನಾ ಯೋಜನೆಗಳು ತಮ್ಮ ಪಕ್ಷದ ಸಾಧನೆ ಎಂದು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಬಿಂಬಿಸಿಕೊಳ್ಳುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎರಡು ಪಕ್ಷಗಳು ಸಮ್ಮಿಶ್ರ ಸರ್ಕಾರವನ್ನು ರಚನೆ ಮಾಡುವ ಸಂದರ್ಭದಲ್ಲಿ ತಾವು ಒಂದೇಮಾತಿಗೆ ಬದ್ಧವಾಗಿದ್ದರೂ ಬಿಜೆಪಿ ವಿಭಿನ್ನ ಧೋರಣೆಯನ್ನು ತಾಳಿರುವುದು ಜನರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪಕ್ಷಗಳೇ ಶ್ರೇಷ್ಠ ಎಂದು ಬಿಂಬಿಸಿಕೊಳ್ಳುವುದು ಉಂಟು. ಉಪ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗಳ ಬಗ್ಗೆ ತಮಗೆ ತೀವ್ರ ಅಸಮಾಧಾನವಾಗಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.
ಬಿಜೆಪಿ ಮುಖಂಡರ ಹೇಳಿಕೆಗಳಿಗೆ ಹೆಚ್ಚು ಮಹತ್ವ ನೀಡುವುದಿಲ್ಲ ಎಂದಿದ್ದಾರೆ. ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಅಗತ್ಯವಾದರೆ ಜಂಟಿ ಶಾಸಕಾಂಗ ಸಭೆಯನ್ನು ಕರೆಯಲಾಗುವುದು ಎಂದು ಹೇಳಿದ್ದಾರೆ.
|