ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾದಾಗಿನಿಂದ ನಡೆಯದಿರುವಷ್ಟು ರಾಜಕೀಯ ವಿದ್ಯಮಾನಗಳು ಸೋಮವಾರ ನಡೆದಿದ್ದು, ಮಂಗಳವಾರವೂ ಕುತೂಹಲಕಾರಿ ಬೆಳವಣಿಗೆಗಳು ನಡೆಯುವ ಎಲ್ಲ ನೀರೀಕ್ಷೆ ಇದೆ. ರಾಜ್ಯದಲ್ಲಿ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸಲೆಂದೇ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಯಶವಂತ ಸಿನ್ಹಾ ಅವರು ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ಜೆಡಿಎಸ್ ಜತೆ ಇನ್ನುಮುಂದೆ ಮಾತುಕತೆ ಇಲ್ಲ ಎಂದು ಕಡ್ಡಿ ತುಂಡುಮಾಡಿದಂತೆ ಸ್ಪಷ್ಟಪಡಿಸಿದ್ದಾರೆ.
ಜೆಡಿಎಸ್ ವರ್ತನೆಯಿಂದ ರೋಸಿಹೋದಂತೆ ಕಾಣುತ್ತಿರುವ ಬಿಜೆಪಿ ಮುಖಂಡರು ತಮ್ಮ ಧೋರಣೆಯನ್ನು ಬದಲಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಆದ ಮೂಲ ಒಪ್ಪಂದದಂತೆಯೇ ನಡೆಯಬೇಕು, ಇದರಲ್ಲಿ ಯಾವುದೇ ಹೊಸ ಷರತ್ತು ಅಥವಾ ಮಾತುಕತೆ ಇಲ್ಲ ಎಂದು ಹೇಳುವ ಮೂಲಕ ಯಶವಂತ ಸಿನ್ಹಾ ತಮ್ಮ ಪಕ್ಷದ ನಿಲುವನ್ನು ಹೇಳಿದ್ದಾರೆ.
ಮಂಗಳವಾರ ಸಂಜೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಬೇಕು, ಜೆಡಿಎಸ್ ಶಾಸಕರು ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸುವ ಶಾಸಕಾಂಗ ಪಕ್ಷದ ನಿರ್ಣಯದ ಪತ್ರ ನೀಡಬೇಕು, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ತಾಕೀತು ಮಾಡಿದ್ದಾರೆ. ಇದೇ ವಿಷಯವನನು ಚರ್ಚಿಸಲೆಂದೆ ಮಂಗಳವಾರ ಯಡಿಯೂರಪ್ಪ ಅವರ ನಿವಾಸದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸಂಸದರು ಹಾಗೂ ಪಕ್ಷದ ರಾಜ್ಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
|