ಚಿತ್ರದುರ್ಗ ಹಾಗೂ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಾಂದೋಲನ ಸಭೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ಸಾವಿರಾರು ಜನ ಒಂದೆಡೆ ಸೇರಿ ಕಾಂಗ್ರೆಸ್ ಪಕ್ಷದ ಹಾಗೂ ಮುಖಂಡರ ಅಭಿಪ್ರಾಯಗಳನ್ನು ಕೇಳಿದ್ದಾರೆ. ಗಂಟೆಗಟ್ಟಲೆ ಕಾದಿದ್ದಾರೆ. ಪಕ್ಷಕ್ಕೆ ಹೆಚ್ಚಿನ ಬೆಂಬಲ ದೊರೆಯುತ್ತಿದೆ ಎಂಬುದು ಇದರಿಂದಲೇ ಗೊತ್ತಾಗುತ್ತದೆ ಎಂದು ತಿಳಿಸಿದರು.
ಬಿಎಸ್ಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ನಾನೆಲ್ಲೂ ಹೇಳಿಕೆ ನೀಡಿಲ್ಲ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಖರ್ಗೆ ತಿಳಿಸಿದ್ದಾರೆ.
ಕೆಪಿಸಿಸಿ ನಿರ್ದೇಶನದ ಅನುಸಾರವೇ ಶಿವಮೊಗ್ಗದಲ್ಲಿ ಸಮಾವೇಶ ಏರ್ಪಡಿಸಲಾಗಿತ್ತು. ಪಕ್ಷದಲ್ಲಿ ಒಡಕಿಲ್ಲ ಎಂಬುದನ್ನು ಹೇಳಲು ಎಲ್ಲ ಮುಖಂಡರು ಇಲ್ಲಿ ಸೇರಿರುವುದೇ ಸಾಕ್ಷಿ ಎಂದು ಖರ್ಗೆ ತಿಳಿಸಿದರು.
|