ತಾವು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿದ್ದ ಸಂಧ್ಯ ಸುರಕ್ಷಾ ಯೋಜನೆಯ ಮಾಸಿಕ ವೇತನವನ್ನು ವಾರದೊಳಗೆ ರಾಜ್ಯಪಾಲರು ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಎಚ್ಚರಿಸಿದ್ದಾರೆ.
ಪಟ್ಟಣದ ನೇತಾಜಿ ಕ್ರೀಡಾಂಗಣದಲ್ಲಿ ಜನಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, 60 ವರ್ಷ ಮೇಲ್ಪಟ್ಟ ವೃದ್ಧರಿಗೆ 400ರೂ. ಮಾಸಿಕ ಭದ್ರತಾ ವೇತನದ ಸಂಧ್ಯಾ ಸುರಕ್ಷಾ ಯೋಜನೆಯನ್ನು ತಾವು ಉಪಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ತರಲಾಗಿತ್ತು. ಆದರೆ ಇದುವರೆಗೆ ಜಾರಿಗೆ ಬಂದಿಲ್ಲ ಎಂದು ಅವರು ಹೇಳಿದರು.
ಗುಜರಾತ್ ಚುನಾವಣೆಯ ಬಗ್ಗೆ ಮಾತನಾಡಿದ ಅವರು ಫಲಿತಾಂಶವು ದೇಶದ ರಾಜಕೀಯದ ಮೇಲೆ ಪರಿಣಾಮ ಬೀರಲಿದೆ. ಗಾಂಧಿ ನಾಡಿನಲ್ಲಿ ಹಿಂದುಳಿದ ವರ್ಗಕ್ಕೆ ಸೇರಿದ ನರೇಂದ್ರ ಮೋದಿಯವರನ್ನು ಪ್ರಧಾನಿ ಮನಮೋಹನ್ ಸಿಂಗ್, ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರಿಂದಲೂ ಸೋಲಿಸಲು ಪ್ರಯತ್ನಿಸಿದರು. ಆದರೆ ನಕಲಿ ಗಾಂಧಿಗಳನ್ನು ನಂಬದೆ ಸಮಾಜ ಸೇವಕ ಮೋದಿಯವರನ್ನು ಜನರು ಬಹುಮತದಿಂದ ಆರಿಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್ ಗುಜರಾತ್ ಫಲಿತಾಂಶದಿಂದ ಕಾಂಗ್ರೆಸ್ ಅಧ್ಯೆಕ್ಷೆ ಸೋನಿಯಾ ಗಾಂಧಿಯವರ ವರ್ಚಸ್ಸು ಕಡಿಮೆಯಾಗಿರುವುದು ಸ್ಪಷ್ಟವಾಗಿದೆ. ಪ್ರತಿಷ್ಠೆಯ ವಿಷಯವಾಗಿದ್ದ ಈ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಜನಾರ್ಧನರೆಡ್ಡಿ. ಡಿ.ಎಸ್. ವೀರಯ್ಯ, ಶೋಭಾ ಕರಂದ್ಲಾಜೆ, ಮಾಜಿ ಸಚಿವರಾದ ಶ್ರೀರಾಮುಲು, ರಾಮಚಂದ್ರ ಗೌಡ, ಕಟ್ಟಾ ಸುಬ್ರಮಣ್ಯ ನಾಯ್ಡು ಮೊದಲಾದ ಪ್ರಮುಖರು ಭಾಗವಹಿಸಿದ್ದರು.
|