ಮುಂದಿನ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಮಾದರಿಯಲ್ಲಿ ಕಾರ್ಯತಂತ್ರ ರೂಪಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಹೇಳಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ರೂಪಿಸಿದ ಕಾರ್ಯತಂತ್ರ ಫಲಕಾರಿಯಾಗಿದ್ದು, ಇದೇ ಮಾದರಿಯಲ್ಲಿ ರಾಜ್ಯ ಮುಂದಿನ ಚುನಾವಣೆಗೆ ಸಿದ್ಧಮಾಡಿಕೊಳ್ಳಲಿದೆ ಎಂದು ಅವರು ತಿಳಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ರೂಪಿಸಬೇಕಾದ ಕಾರ್ಯತಂತ್ರಗಳ ಕುರಿತು ಪಕ್ಷದ ಹಿರಿಯ ಮುಖಂಡ ರಾಜ್ಯದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಯಶವಂತ ಸಿನ್ಹಾ ನೇತೃತ್ವದಲ್ಲಿ ನಡೆದ ಹಿರಿಯ ನಾಯಕರ ಕೋರ್ ಕಮಿಟಿ ಸಭೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ಆಂತರಿಕ ಸಂಘರ್ಷಗಳಿಲ್ಲ ಎಂದು ಸ್ಪಷ್ಟ ಪಡಿಸಿದ ಅವರು ಮುಂದಿನ ಚುನಾವಣೆಯ ದಿನಾಂಕ ಪ್ರಕಟವಾಗುವವರೆಗೂ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದಿಲ್ಲ ಎಂದು ತಿಳಿಸಿದರು.
ಹಿರಿಯ ಮುಖಂಡರು ಪ್ರವಾಸದಲ್ಲಿರುವುದರಿಂದ ಸಭೆಗೆ ಹಾಜರಾಗಲಿಲ್ಲ. ಅದಕ್ಕೆ ಬೇರೆ ಕಾರಣ ಹುಡುಕುವ ಪ್ರಯತ್ನ ಬೇಡ ಎಂದು ಸದಾನಂದಗೌಡ ತಿಳಿಸಿದರು.
|