ರೈತ ವಿರೋಧಿ, ದುರ್ಬಲ ಆರ್ಥಿಕ ನೀತಿಗಳನ್ನು ಅನುಸರಿಸುತ್ತಿರುವ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿಯುವ ಕಾಲ ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ ಟೀಕಿಸಿದ್ದಾರೆ. ಈ ಮೂಲಕ ಕೇಂದ್ರ ಹಾಗೂ ರಾಜ್ಯಗಳಲ್ಲಿ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯದಲ್ಲಿ ತೀವ್ರತರ ಬೆಳವಣಿಗೆಗಳು ಕಂಡು ಬರುತ್ತಿರುವುದು ಸ್ಪಷ್ಟವಾಗುತ್ತಿದೆ. ಈಗಾಗಲೇ ಸಾಕಷ್ಟು ಭರವಸೆ, ಆಶ್ವಾಸನೆಗಳನ್ನು ನೀಡುತ್ತಾ ಬಂದಿರುವ ಪಕ್ಷಗಳು ಚುನಾವಣೆಗೆ ಭರದಿಂದ ಸಿದ್ಥತೆ ನಡೆಸುತ್ತಿದೆ.
ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ನಡೆದ ರೈತರು ಹಾಗೂ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಂಗ್, ದೇಶದಲ್ಲಿ ಸುಮಾರು 15000 ರೈತರು ಸರ್ಕಾರದ ನೀತಿಯಿಂದ ಆತ್ಮಹತ್ಯೆಗೆ ಒಳಗಾಗಿದ್ದಾರೆ. ಇದು ಕಾಂಗ್ರೆಸ್‌ನ ದೌರ್ಬಲ್ಯವನ್ನು ತೋರಿಸುತ್ತದೆ ಎಂದು ಟೀಕಿಸಿದರು.
ಕೇಂದ್ರದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರಿಗೆ, ನೇಕಾರರಿಗೆ ಮತ್ತು ಮೀನುಗಾರರಿಗೆ ನೀಡುವ ಬಡ್ಡಿದರದಲ್ಲಿ ಶೇ.4ರಷ್ಟು ಕಡಿಮೆ ಮಾಡಲಿದ್ದು, ಭತ್ತಕ್ಕೆ ಬೆಂಬಲ ಬೆಲೆಯನ್ನು ನೀಡಲಿದೆ ಎಂದು ಅವರು ಭರವಸೆ ನೀಡಿದರು.
|