ರೈಲ್ವೆ ನೇಮಕಾತಿಗೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪವನ್ನು ತಾಳುತ್ತಿರುವ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ನೇಮಕಾತಿಯಲ್ಲಿ ಯಾವುದೇ ತಾರತಮ್ಯ ನೀತಿ ಅನುಸರಿಸಿಲ್ಲ ಎಂದು ಸ್ಪಷ್ಟ ಪಡಿಸಿದೆ.
ರೈಲ್ವೆ ಮಂಡಳಿ ನೀಡಿರುವ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ನೈರುತ್ಯ ರೈಲ್ವೆ ವಲಯದಲ್ಲಿ ಗ್ರೂಪ್ ಡಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದ್ದು, ಇದರಲ್ಲಿ ಯಾವುದೇ ರೀತಿಯ ಬದಲಾವಣೆಯಾಗಲಿ, ಪಕ್ಷಪಾತವಾಗಲಿ ನಡೆದಿಲ್ಲ ಎಂದು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಮಂಡಳಿ ನಿರ್ದೇಶನದಂತೆ ಸ್ಥಳೀಯ ಪತ್ರಿಕೆಗಳಲ್ಲಿ ರೈಲ್ವೆ ನೇಮಾಕಾತಿ ಕುರಿತು ಜಾಹಿರಾತುಗಳನ್ನು ಪ್ರಕಟಿಸಲಾಗಿತ್ತು. ಅಲ್ಲದೆ, ಬಂದಂತಹ ಅರ್ಜಿಗಳನ್ನು ಕೂಲಂಕಷವಾಗಿ ಪರೀಶೀಲಿಸಿದ ನಂತರವಷ್ಟೆ ಅರ್ಹ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಪಡಿಸಿ, ಪತ್ರಗಳನ್ನು ರವಾನಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅನ್ಯಾಯವನ್ನು ರೈಲ್ವೆ ಇಲಾಖೆ ಎಸಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೂವರು ಅಧಿಕಾರಿಗಳ ಸಮಿತಿಯ ಮೇಲ್ವಿಚಾರಣೆಯಲ್ಲಿ ಈ ಪ್ರಕ್ರಿಯೆ ನಡೆದಿದ್ದು, ಅರ್ಹ ಅಭ್ಯರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ. ಅಲ್ಲದೆ, ಪರೀಕ್ಷಾ ವಿವರಗಳ ವಿಡಿಯೋ ಚಿತ್ರೀಕರಣವನ್ನು ಮಾಡಲಾಗಿದ್ದು, ನೇಮಕಾತಿಗೆ ಯಾವುದೇ ಚ್ಯುತಿ ಬರದಂತೆ ಪರೀಕ್ಷೆ ನಡೆಸಲಾಗಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಆರೋಪ ಮಾಡಿರುವುದು ಸುಳ್ಳು ಎಂದು ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆದರೆ ರೈಲ್ವೆ ನೇಮಾಕಾತಿ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆಯನ್ನು ಮುಂದುವರೆಸಿದೆ. ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ಪ್ರಯಾಣಕ್ಕೆ ಅಡ್ಡಿಪಡಿಸಿದರು.
|