ತಮಿಳುನಾಡಿನ ಮಧುರೈ ಜಿಲ್ಲೆಯ ದಿಂಡಗಲ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೀದರ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಗುರುಪಾದಪ್ಪ ನಾಗಮಾರಪಳ್ಳಿಯವರ ಪುತ್ರ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.
ಜ್ಯೋತಿರ್ಲಿಂಗ ದರ್ಶನ ಮಾಡಲು ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಕನ್ಯಾಕುಮಾರಿಯಿಂದ ಮಧುರೈಗೆ ಕಾರಿನಲ್ಲಿ ಬರುತ್ತಿದ್ದ ಸಂದರ್ಭದಲ್ಲಿ ದಿಂಡಗಲ್ ಬಳಿ ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಇತರ ಮೂವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಈ ಪ್ರಕರಣವನ್ನು ದಿಂಡಗಲ್ ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಗುರುಪಾದಪ್ಪನವರ ಮೂರನೇ ಪುತ್ರ ನಾಗರಾಜ ಗುರುಪಾದಪ್ಪ ನಾಗಮಾರಪಳ್ಳಿ ಹಾಗೂ ಮೊಮ್ಮಗ ಕೈಲಾಸ ವಿಜಯಕುಮಾರ ನಾಗಮಾರಪಳ್ಳಿ ಅವರು ಅಸುನೀಗಿದ ದುರ್ದೈವಿಗಳೆಂದು ಗುರುತಿಸಲಾಗಿದೆ. ಈ ಹಿಂದೆ ನಾಗಮಾರಪಳ್ಳಿಯವರ ಇನ್ನೊಬ್ಬ ಪುತ್ರ ವಿಜಯಕುಮಾರ ಎಂಬುವವರನ್ನು ಆಸ್ತಿ ವಿವಾದಕ್ಕೆ ಸಂಬಂಧಪಟ್ಟಂತೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಒಂದು ವರ್ಷ ತುಂಬುವ ಮೊದಲೇ ಮತ್ತೊಬ್ಬ ಪುತ್ರ ಸಾವೀಗೀಡಾಗಿದ್ದು ನಾಗಮಾರಪಳ್ಳಿ ಕುಟುಂಬಕ್ಕೆ ಭಾರಿ ಹೊಡೆತ ಬಿದ್ದಂತಾಗಿದೆ.
ಈ ಘಟನೆಗೆ ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಹಾಗೂ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕುಟುಂಬದವರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
|