ರಾಜ್ಯದಲ್ಲಿ ಯುವ ಶಕ್ತಿಯನ್ನು ಒಟ್ಟಿಗೆ ಕೊಂಡೊಯ್ಯುವ ಮೂಲಕ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಯುವ ಮೋರ್ಚಾ ರಾಷ್ಟ್ತ್ರೀಯ ಕಾರ್ಯದರ್ಶಿ ಜಯಕುಮಾರ್ ರಾಹುಳೆ ಅಭಿಪ್ರಾಯ ಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಯುವಮೋರ್ಚಾ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರ ಸ್ಥಾಪಿಸಲು ಬಿಜೆಪಿಗೆ ಒಳ್ಳೆಯ ಅವಕಾಶವಿದೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶದ ರೀತಿಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಯುವಮೋರ್ಚಾ ಪ್ರಮುಖ ಪಾತ್ರ ವಹಿಸಲಿದೆ ಎಂದ ಅವರು, ಪಕ್ಷದಲ್ಲಿ ಯುವಕರಿಗೆ ಹೆಚ್ಚಿನ ಆದ್ಯತೆಯನ್ನು ರಾಜ್ಯದಲ್ಲಿ ಮಾತ್ರವಲ್ಲದೆ ರಾಷ್ಟ್ರ ಮಟ್ಟದಲ್ಲಿಯೂ ನೀಡಲಾಗಿದೆ. ಮುಂದಿನ ಚುನಾವಣೆಯಲ್ಲಿ ಬಹಳಷ್ಟು ಯುವ ನಾಯಕರು ಶಾಸಕರಾಗಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವಮೋರ್ಚಾ ರಾಜ್ಯಾಧ್ಯಕ್ಷ ಗೀರೀಶ್ ಮಟ್ಟೆಣ್ಣನವರ್, ಮುಂಬರುವ ಚುನಾವಣೆಯಲ್ಲಿ ಪಕ್ಷದ ಪಾತ್ರ ಮತ್ತು ಸಂಘಟನೆ ಕುರಿತು ಸಭೆಯಲ್ಲಿ ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಯಕಾರಿಣಿ ಸಭೆಯನ್ನು ಯುವಮೋರ್ಚಾ ಅಧ್ಯಕ್ಷ ಅಮಿತ್ ಠಾಕೂರ್ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಜ್ಯಧ್ಯಕ್ಷ ಡಿ.ವಿ.ಸದಾನಂದ ಗೌಡ ಪಾಲ್ಗೊಳ್ಳುವರು ಎಂದು ಮಟ್ಟೆಣ್ಣನವರ್ ತಿಳಿಸಿದರು.
|