ಸರಕಾರದ ಮುಖ್ಯಕಾರ್ಯದರ್ಶಿಯಾಗಿದ್ದ ಪಿ.ಬಿ. ಮಹಿಷಿ ಅವರ ಸ್ಥಾನಕ್ಕೆ ಸುಧಾಕರ ರಾವ್ ಅವರನ್ನು ನೇಮಿಸಲಾಗಿದೆ.
ಹಿರಿಯ ಐಎಎಸ್ ಅಧಿಕಾರಿಯಾಗಿರುವ ಸುಧಾಕರ್ ರಾವ್ ಅವರನ್ನು ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ನೇಮಿಸುವಂತೆ ಇತ್ತೀಚೆಗಷ್ಟೆ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಅವರಿಗೆ ಪ್ರಸ್ತಾವನೆ ಕಳುಹಿಸಿದ್ದು, ಗೃಹ ಇಲಾಖೆ ಇದಕ್ಕೆ ಒಪ್ಪಿಗೆ ಸೂಚಿಸಿದ್ದರಿಂದ ಈ ಬದಲಾವಣೆಗೆ ಕಾರಣವಾಗಿದೆ ಎನ್ನಲಾಗಿದೆ.
ಮಹಿಷಿಯವರ ಕಾರ್ಯವೈಖರಿ ಕುರಿತಂತೆ ರಾಜ್ಯಪಾಲರು ಅಸಮಾಧಾನ ಹೊಂದಿದ್ದು, ಈ ಕಾರಣದಿಂದ ಮಹಿಷಿ ಅವರನ್ನು ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿ) ಅಧ್ಯಕ್ಷರನ್ನಾಗಿ ವರ್ಗಾವಣೆ ಮಾಡುವಂತೆ ಆದೇಶಿಸಿದ್ದಾರೆ ಎಂದು ಹೇಳಲಾಗಿದೆ.
ಪಿ.ಬಿ ಮಹಿಷಿ ಅವರು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬಕ್ಕೆ ಆಪ್ತರಾಗಿದ್ದರು. ಈ ಹಿಂದೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಮಹಿಷಿ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರೂ ಒತ್ತಡ ಹೇರಿದ್ದರಿಂದ ರಾಜ್ಯಪಾಲರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಕೆಲವು ಮೂಲಗಳು ತಿಳಿಸಿವೆ.
|