ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರ ರಾಜ್ಯಪಾಲ ಎಸ್.ಎಂ.ಕೃಷ್ಣರವರ ಆಗತ್ಯವಿದೆ ಎಂದು ಮಾಜಿ ಕಾಂಗ್ರೆಸ್ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ಹೇಳಿದ್ದಾರೆ. ಅಲ್ಲದೆ, ರಾಜ್ಯ ರಾಜಕೀಯದಲ್ಲಿ ಅವರು ಮರುಪ್ರವೇಶ ಮಾಡುವುದರಿಂದ ಕಾಂಗ್ರೆಸ್ ಪಕ್ಷದ ವರ್ಚಸ್ಸು ಹೆಚ್ಚುತ್ತದೆ ಎಂದೂ ಅವರು ಅಭಿಪ್ರಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೀರಭದ್ರಪ್ಪನವರು, ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕೃಷ್ಣ ಆಗಮನಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ನುಡಿದರು.
ಪಕ್ಷಕ್ಕೆ ಮರಳಿದರೆ ಅವರ ಸ್ಥಾನದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೃಷ್ಣರವರ ಸ್ಥಾನದ ಕುರಿತು ಇನ್ನು ನಿರ್ಧರಿಸಲಾಗಿಲ್ಲ. ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್ ಬಿಟ್ಟ ವಿಚಾರ ಎಂದು ತಿಳಿಸಿದರು.
ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಶೇ. 3ರಷ್ಟು ಬಡ್ಡಿದರದಲ್ಲಿ ಸಾಲ ನೀಡುವುದು ಹಾಗೂ ಬಡವರಿಗೆ 25 ಕೆ.ಜಿ. ಅಕ್ಕಿ ವಿತರಿಸಲಾಗುವುದು ಎಂದ ಅವರು, ಗ್ರಾಮಾಂತರ ಪ್ರದೇಶಗಳ ಜನರಿಗೆ ದಿನದ 24 ಗಂಟೆಯೂ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗುವುದು ಎಂಬ ಭರವಸೆ ನೀಡಿದರು.
|