ಕಳೆದ ಬಜೆಟ್‌ನಲ್ಲಿ ಪ್ರಕಟಿಸಿರುವ ಕಾರ್ಯಕ್ರಮಗಳ ಅನುಷ್ಠಾನವನ್ನು ಶೀಘ್ರವೇ ಜಾರಿಗೆ ತರಲಾಗುವುದು ಮತ್ತು ರೈತ ಹಾಗೂ ಜನಪರ ಬಜೆಟ್‍ಗೆ ಆದ್ಯ ಗಮನ ನೀಡಲಾಗುವುದು ಎಂದು ನೂತನವಾಗಿ ಅಧಿಕಾರ ಸ್ವೀಕರಿಸಿರುವ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ತಿಳಿಸಿದ್ದಾರೆ.
ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿದ್ದ ಪಿ.ಬಿ. ಮಹಿಷಿಯವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಉಗ್ರರ ಚಟುವಟಿಕೆ ತೀವ್ರಗೊಂಡಿದ್ದು, ಅದಕ್ಕೆ ಕಡಿವಾಣ ಹಾಕಬೇಕಿದೆ ಎಂದು ನುಡಿದರು.
ಪ್ರಸ್ತುತ ರಾಜ್ಯದಲ್ಲಿ ಚುನಾಯಿತ ಪಕ್ಷ ಇಲ್ಲದಿರುವುದರಿಂದ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿದೆ, ಈ ನಿಟ್ಟಿನಲ್ಲಿ ಪ್ರತಿಯೊಂದು ಜಿಲ್ಲಾಡಳಿತಕ್ಕೆ ಮನವರಿಕೆ ಮಾಡಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿನ ಕಾರ್ಯದರ್ಶಿಗಳು ಅಭಿವೃದ್ದಿ ಕಾರ್ಯವನ್ನು ಚುರುಕುಗೊಳಿಸುವಂತೆ ಆದೇಶಿಸಲಾಗುವುದು ಎಂದು ಅವರು ತಿಳಿಸಿದರು.
ರಾಜ್ಯಪಾಲರ ಕಾರ್ಯದರ್ಶಿ ಹುದ್ದೆ ವಿವಾದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ ಸುಧಾಕರ್, ರಾಜ್ಯಪಾಲರು ತಮ್ಮ ಮೇಲೆ ನಂಬಿಕೆಯಿಟ್ಟು ಈ ಹುದ್ದೆಯನ್ನು ನೀಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಕಾರ್ಯ ನಿರ್ವಹಿಸುವುದು ತನ್ನ ಪ್ರಥಮ ಆದ್ಯತೆ ಎಂದು ತಿಳಿಸಿದರು.
|