ಹೊಗೇನಕಲ್ ಜಲಾಶಯ ವಿವಾದಕ್ಕೆ ಸಂಬಂಧಿಸಿ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದ್ದು ಅಲ್ಲಿಂದ ಪ್ರತಿಕ್ರಿಯೆ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ತಿಳಿಸಿದ್ದಾರೆ.
ರಾಜ್ಯ ಸರಕಾರಿ ನೌಕರರ ಸಂಘಕ್ಕೆ ಆಯ್ಕೆಯಾದ ರಾಜ್ಯ ಪರಿಷತ್ ಸದಸ್ಯರ ಪ್ರಥಮ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.
ಹೊಗೇನಕಲ್ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಕಾನೂನು ತಜ್ಞರೊಂದಿಗೆ ಸಮಾಲೋಚನೆಗಳನ್ನು ನಡೆಸಲಾಗಿದ್ದು ಕೇಂದ್ರ ಸರಕಾರದಿಂದ ಉತ್ತರ ಬಂದ ನಂತರ ಅಗತ್ಯವಾದಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಸುಧಾಕರ್ ರಾವ್ ಹೇಳಿದರು.
ಹೊಗೇನಕಲ್ ವಿವಾದಕ್ಕೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ ಅವರು, 5ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು, ಈ ಕುರಿತು ಸರಕಾರಿ ನೌಕರರು ಯಾವುದೇ ಗೊಂದಲವನ್ನು ಇಟ್ಟುಕೊಳ್ಳುವುದು ಬೇಡ ಎಂದು ತಿಳಿಸಿದರು.
|