ಚುನಾವಣಾ ಗಿಮಿಕ್‌ಗಳಿಂದ ತುಂಬಿದ ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಹಾಗೂ ಕೇಂದ್ರ ಸರಕಾರದ ರೈತ ವಿರೋಧಿ ನೀತಿಯನ್ನು ವಿರೋಧಿಸಿ ರಾಜ್ಯ ಬಿಜೆಪಿ ಸಮರ ಸಾರಲಿದೆಯೆಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ಗೌಡ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಹಿಂದಿನ ಎರಡು ಬಜೆಟ್ನಲ್ಲಿ ರೈತರಿಗೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಾಡಿರುವ ಸಾಲ ಮನ್ನಾ ಯೋಜನೆಯಿಂದ ರಾಜ್ಯದ ರೈತರಿಗೆ ಯಾವುದೇ ಅನುಕೂಲವಿಲ್ಲ ಎಂದು ತಿಳಿಸಿದರು.
ಕೇಂದ್ರ ಸರಕಾರದ ಈ ಚುನಾವಣಾ ಸ್ಟಂಟ್ ವಿರೋಧಿಸಿ ಮುಂದಿನ ವಾರ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ತಿಳಿಸಿದ ಸದಾನಂದ ಗೌಡರು ರೈಲ್ವೆ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಕುರಿತು ಸಂಸತ್ ಒಳಗೆ ಮತ್ತು ಹೊರಗೆ ಪ್ರತಿಭಟನೆ ನಡೆಸುವುದಾಗಿಯೂ ತಿಳಿಸಿದರು.
ಮೇ ತಿಂಗಳೊಳಗಾಗಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯುವುದು ನಿಶ್ಚಿತ ಎಂದು ತಿಳಿಸಿದ ಸದಾನಂದಗೌಡ ಜನತೆಯ ಒಲವು ಈ ಬಾರಿ ಪಕ್ಷಕ್ಕೆ ಸಂಪೂರ್ಣವಾಗಿ ದೊರೆಯುವುದರ ಕುರಿತು ವಿಶ್ವಾಸ ವ್ಯಕ್ತಪಡಿಸಿದರು.
|