ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಾಗಿ ದುಡಿದರೆ ಸ್ಪಷ್ಟ ಬಹುಮತ ದೊರೆಯಲಿದೆ ಎಂದು ಸಂಸದ ಹಾಗೂ ಚಿತ್ರನಟ ಅಂಬರೀಷ್ ಅಭಿಪ್ರಾಯ ಪಟ್ಟಿದ್ದಾರೆ.
ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿರುವ ಆಂತರಿಕ ಭಿನ್ನಾಭಿಪ್ರಾಯಗಳು ಮೊದಲು ನಿವಾರಣೆಯಾಗಬೇಕು. ಇದಕ್ಕೆ ಪರಿಹಾರ ದೊರೆತಾಗ ಮಾತ್ರ ಚುನಾವಣೆಯಲ್ಲಿ ಅಧಿಕಾರ ಪಡೆಯುವುದು ಸಾಧ್ಯ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರದ ಕುರಿತು ಮಾತನಾಡಿದ ಅಂಬರೀಷ್, ರಾಜ್ಯದಲ್ಲಿ ಇನ್ನೊಮ್ಮೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಅದು ದುರಂತ ಕಾಣುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ನಿಚ್ಚಳ ಬಹುಮತ ಪಡೆದು ಅಧಿಕಾರ ಸ್ಥಾಪಿಸುವುಕ್ಕಾಗಿ ಶ್ರಮಿಸಲಿದೆ ಎಂದು ತಿಳಿಸಿದರು.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸಿರುವ ಅವರು, ಇನ್ನು ಕ್ಷೇತ್ರದ ಬಗ್ಗೆ ಅಂತಿಮ ನಿರ್ಧಾರ ಪ್ರಕಟಿಸಬೇಕಿದೆ. ಕೇವಲ ಅನುಕಂಪದ ಅಲೆಯಿಂದ ಬಿಜೆಪಿ ಅಧಿಕಾರ ಗಳಿಸುವುದು ಅಸಾಧ್ಯ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|