ಬಿಜೆಪಿಯಿಂದ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಅನಿಲ್ ಲಾಡ್ ಕಾಂಗ್ರೆಸ್ ಬಾಗಿಲನ್ನು ತಟ್ಟಿದ್ದಾರೆ.
ಮಂಗಳವಾರ ಕಾಂಗ್ರೆಸ್ ಹಿರಿಯ ಮುಖಂಡ ಅಲ್ಲಂ ವೀರಭದ್ರಪ್ಪ ಅವರ ನಿವಾಸಕ್ಕೆ ತೆರಳಿರುವ ಅನಿಲ್ ಲಾಡ್ ಈ ಕುರಿತು ಮಾತುಕತೆ ನಡೆಸಿದ್ದಾರೆ. ಮಾತುಕತೆಯ ವಿವರಗಳು ಬಂದಿಲ್ಲವಾದರೂ, ಲಾಡ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಾಗಿದೆ.
ಅಲ್ಲದೆ, ಬಳ್ಳಾರಿ ನಗರ ಕ್ಷೇತ್ರದಿಂದ ಲಾಡ್ ಅವರನ್ನು ಕಣಕ್ಕಿಳಿಸುವ ಕುರಿತು ಕಾಂಗ್ರೆಸ್‌ನಲ್ಲಿ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಇಂದು ಅಥವಾ ನಾಳೆ ಅಧಿಕೃತವಾಗಿ ಪ್ರಕಟಣೆ ಹೊರಬೀಳುವ ಸಾಧ್ಯತೆಗಳಿದ್ದು, ಇನ್ನೆರೆಡು ದಿನಗಳಲ್ಲಿ ತಮ್ಮ ಬೆಂಬಲಿಗರೊಂದಿಗೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದಿವಾಕರ ಬಾಬು ಜೆಡಿಎಸ್‌ಗೆ ಈ ಮಧ್ಯೆ, ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಮುಂಡ್ಲೂರು ದಿವಾಕರ ಬಾಬು ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದಾರೆ. ಸೇರ್ಪಡೆ ಬಳಿಕ ಮಾತನಾಡಿದ ಬಾಬು ಅವರು, ಕಾಂಗ್ರೆಸ್ ಘಟಕ ಬಿಜೆಪಿ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಲ್ಲದೆ, ಮೂಲ ಕಾಂಗ್ರೆಸ್ಸಿಗರನ್ನು ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಶಾಂತಿ ನೆಲೆಸುವಂತೆ ಮಾಡುವುದು ತನ್ನ ಮೂಲ ಉದ್ದೇಶ ಎಂದು ತಿಳಿಸಿದರು.
ಬಳಿಕ ಮಾತನಾಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ದಿವಾಕರ ಬಾಬು ಸೇರ್ಪಡೆಯಿಂದ ಬಳ್ಳಾರಿ ಜಿಲ್ಲೆಯಲ್ಲಿ ಪಕ್ಷಕ್ಕೆ ದೈತ್ಯ ಶಕ್ತಿ ಬಂದಂತಾಗಿದೆ. ಜಿಲ್ಲೆಯಲ್ಲಿ ಗಣಿ ರಾಜಕಾರಣದ ಹಣಬಲ ಮೆಟ್ಟಿ ನಿಲ್ಲುವ ಶಕ್ತಿ ಈಗ ಜೆಡಿಎಸ್ ಪಕ್ಷಕ್ಕೂ ಬಂದಿದೆ ಎಂದು ಗುಡುಗಿದರು.
|